ಅತಂತ್ರ ವಿಧಾನಸಭೆ ನಿರ್ಮಾಣವಾದ ಗೋವಾದಲ್ಲಿ ಚದುರಂಗದಾಟ ಶುರುವಾಗಿದೆ. ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ ಅವರು ಬಿಜೆಪಿಯ ಮನೋಹರ್‌ ಪರಿಕ್ಕರ್‌ ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ.
ಗೋವಾ(ಮಾ.14): ಅತಂತ್ರ ವಿಧಾನಸಭೆ ನಿರ್ಮಾಣವಾದ ಗೋವಾದಲ್ಲಿ ಚದುರಂಗದಾಟ ಶುರುವಾಗಿದೆ. ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ ಅವರು ಬಿಜೆಪಿಯ ಮನೋಹರ್ ಪರಿಕ್ಕರ್ ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನ ಮೊರೆ ಹೋಗಿದೆ.
ಇತ್ತೀಚೆಗೆ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡನೇ ಸ್ಥಾನಗಳಿಸಿದ್ದರೂ, ರಾಜ್ಯಪಾಲರು ಅದಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ ಎಂದು ಅದು ಆರೋಪಿಸಿದೆ. ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಚಂದ್ರಕಾಂತ್ ಕಾವ್ಳೇಕರ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡುವುದು ರಾಜ್ಯಪಾಲರ ಕರ್ತವ್ಯವಾಗಿತ್ತು ಎಂದು ಅರ್ಜಿಯಲ್ಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನ ವಿಶೇಷ ನ್ಯಾಯಪೀಠದ ಮುಂದೆ ಇಂದು ಬೆಳಗ್ಗೆ ಅರ್ಜಿ ವಿಚಾರಣೆಗೆ ಬರಲಿದೆ. ಕಾವ್ಳೇಕರ್ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಲಿದ್ದಾರೆ.
ಇನ್ನು ಮತ್ತೊಂದೆಡೆ ಮನೋಹರ ಪರಿಕ್ಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಬಿಜೆಪಿ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ. ಅಧಿಕಾರ ಸ್ವೀಕರಿಸಿದ 15 ದಿನಗಳೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕು ಎಂದು ರಾಜ್ಯಪಾಲರು ಸೂಚಿಸಿದ್ದಾರೆ. ಗೋವಾದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ.
ಸಂಜೆ 5 ಗಂಟೆಗೆ ಪರಿಕ್ಕರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
