ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳು ಹ್ಯಾಕ್ ಆಗದಂತೆ ಖಾತರಿಯುತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು(ಸೆ.16): ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳು ಹ್ಯಾಕ್ ಆಗದಂತೆ ಖಾತರಿಯುತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಚುನಾವಣೆ ಬಳಿಕ ಇವಿಎಂಗಳನ್ನು ಹ್ಯಾಕ್ ಮಾಡುವ ಮೂಲಕ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗದಿಂದ ರಾಷ್ಟ್ರಪತಿಯವರೆಗೂ ಸಾಕಷ್ಟು ದೂರುಗಳು ಹೋಗಿವೆ. ಹಾಗಾಗಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳಸುವ ಇವಿಎಂಗಳು ಹ್ಯಾಕ್ ಆಗಲು ಸಾಧ್ಯವಿಲ್ಲ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವ್ಯಕ್ತಿ ಮತದಾನ ಮಾಡಿದ ಬಳಿಕ ತಾನು ಯಾವ ಅಭ್ಯರ್ಥಿ ಅಥವಾ ಪಕ್ಷಕ್ಕೆ ಮತದಾನ ಮಾಡಿದೆ ಎಂಬ ಬಗ್ಗೆ ಆತನಿಗೆ ಸೂಕ್ತ ದಾಖಲೆ ಲಭ್ಯವಾಗಬೇಕು. ಹಾಗೂ ಇವಿಎಂ ಯಂತ್ರಕ್ಕೆ ವಿವಿಪ್ಯಾಟ್ ಕಡ್ಡಾಯಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಮಧ್ಯೆ, ಇದೇ ವಿಚಾರವಾಗಿ ಎಐಸಿಸಿಗೂ ಪತ್ರ ಬರೆದಿರುವ ಕೆಪಿಸಿಸಿ, ಇವಿಎಂಗಳು ಹ್ಯಾಕ್ ಆಗುವುದಿಲ್ಲ ಎಂಬುದನ್ನು ಖಾತರಿಪಡಿಸಲು ಹಾಗೂ ವಿವಿಪ್ಯಾಟ್ ಅಳವಡಿಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಒತ್ತಡ ತರುವಂತೆ ಮನವಿ ಮಾಡಿದೆ ಎಂದು ತಿಳಿದು ಬಂದಿದೆ.
