ಬೆಂಗಳೂರು[ಸೆ.24]: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ  ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ನಡೆದ ಮೈತ್ರಿ ಸಮಿತಿ ಸಭೆಯಲ್ಲಿ ಜ್ಯಾತಾತೀತ ಜನತಾದಳದೊಂದಿಗೆ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. 

ಸಭೆಯಲ್ಲಿ ರಾಜ್ಯದಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಸಭೆಯಲ್ಲಿ ಮೈತ್ರಿ ಬಗ್ಗೆ ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಚುನಾವಣೆಯಲ್ಲಿ ಎಷ್ಟು ಸೀಟು ಹಂಚಿಕೆಯ ಬಗ್ಗೆ ಮಾತ್ರ ಇನ್ನು ತೀರ್ಮಾನಕ್ಕೆ ಬರಲಾಗಿಲ್ಲ. ಕೇಂದ್ರದಲ್ಲಿ ಆಡಳಿತರೂಢ ಬಿಜೆಪಿ ಪಕ್ಷವನ್ನು ಮಣಿಸಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷ  ದೇಶದ ಬಹುತೇಕ ರಾಜ್ಯಗಳ ವಿರೋಧ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಬಯಸಿದೆ.

ಎಐಸಿಸಿ ನಾಯಕರು ಈಗಾಗಲೇ ಪ್ರಮುಖ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ.  ಸಮ್ಮಿಶ್ರ  ಸರ್ಕಾರ ಉದಯವಾದ ಸಂದರ್ಭದಲ್ಲೂ ಸಿಎಂ ಕುಮಾರಸ್ವಾಮಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಯಾವತಿ, ಅಖಿಲೇಶ್ ಯಾದವ್, ಅರವಿಂದ್  ಕೇಜ್ರೀವಾಲ್, ಮಮತಾ ಬ್ಯಾನರ್ಜಿ ಸೇರಿದಂತೆ ವಿವಿಧ ರಾಜ್ಯಗಳ ನಾಯಕರು ಆಗಮಿಸಿದ್ದನ್ನು ಸ್ಮರಿಸಬಹುದು.