ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಕಾಂಗ್ರೆಸ್ ಮುಖಂಡರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಇದೀಗ ಹಾಸನ ಕಾಂಗ್ರೆಸ್ ಮುಖಂಡರು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು : ಸಚಿವ ಎಚ್.ಡಿ.ರೇವಣ್ಣ ಅವರು ಹಾಸನದ ಕಾಂಗ್ರೆಸ್ ಮುಖಂಡರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಲವು ಮುಖಂಡರು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು.
ಮಂಗಳವಾರ ಡಾ.ಜಿ. ಪರಮೇಶ್ವರ್ ಅವರ ನಿವಾಸದಲ್ಲಿ ಭೇಟಿ ಮಾಡಿದ ಹಾಸನ ಮುಖಂಡರು, ಎಚ್.ಡಿ. ರೇವಣ್ಣ ಅವರು ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ. ವಿಧಾನಸಭೆ ಚುನಾವಣೆಯ ಸೇಡನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ಪಕ್ಷ ಸಂಘಟನೆಗೆ ಅವಕಾಶ ನೀಡುತ್ತಿಲ್ಲ. ಕಾಂಗ್ರೆಸ್ ಮುಖಂಡರನ್ನು ಹೆದರಿಸುವ ಹಾಗೂ ಅಧಿಕಾರದ ಮೂಲಕ ಶಕ್ತಿ ಕುಂದಿಸಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಸಮನ್ವಯ ಸಮಿತಿ ಮಟ್ಟದಲ್ಲಿ ಚರ್ಚೆ ಮಾಡಬೇಕು ಎಂದು ಮನವಿ ಮಾಡಿದರು ಎಂದು ತಿಳಿದುಬಂದಿದೆ.
ಇದೇ ವೇಳೆ ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು. ಮಂಡ್ಯ ಹಾಗೂ ಹಾಸನ ಎರಡರಲ್ಲೂ ಕಾಂಗ್ರೆಸ್‌ಗೆ ನೆಲೆ ಇದೆ. ಇಂತಹ ವೇಳೆಯಲ್ಲಿ ಎರಡೂ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಭವಿಷ್ಯದಲ್ಲಿ ಪಕ್ಷ ಸಂಘಟನೆ ಕಷ್ಟವಾಗಲಿದೆ. ಹೀಗಾಗಿ ಪಕ್ಷದ ಭವಿಷ್ಯದ ದೃಷ್ಟಿಯಿಂದ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂದು ಪಟ್ಟು ಹಿಡಿದರು ಎಂದು ಮೂಲಗಳು ತಿಳಿಸಿವೆ.
ಈ ವೇಳೆ ಡಾ.ಜಿ. ಪರಮೇಶ್ವರ್ ಅವರು, ಲೋಕಸಭೆ ಟಿಕೆಟ್ ಹಂಚಿಕೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಈ ಬಗ್ಗೆ ಚರ್ಚೆಯಾದಾಗ ನಿಮ್ಮ ಸಲಹೆಗಳನ್ನು ಪರಿಗಣಿಸಲಾಗುವುದು. ಎಚ್.ಡಿ. ರೇವಣ್ಣ ಅವರಿಂದ ಕಿರುಕುಳ ಉಂಟಾಗಿರುವುದು ನಿಜವಾದರೆ ಈ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು ಎನ್ನಲಾಗಿದೆ.
