ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕರು, ಸಂಸದರು ಸೇರಿ ಎಲ್ಲಾ ಕಾಂಗ್ರೆಸ್ ಮುಖಂಡರಿಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕರು, ಸಂಸದರು ಸೇರಿ ಎಲ್ಲಾ ಕಾಂಗ್ರೆಸ್ ಮುಖಂಡರಿಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪತ್ರ ಬರೆದು ಸೂಚನೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಶಾಸಕರು, ಪರಾಜಿತ ಅಭ್ಯರ್ಥಿಗಳು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ನಿಗಮ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಪರಮೇಶ್ವರ್ ಅವರು ಈ ಕೂಡಲೇ ಎಲ್ಲರೂ ಟ್ವೀಟರ್, ಫೇಸ್‌ಬುಕ್, ವಾಟ್ಸ್ ಆ್ಯಪ್ ಗ್ರೂಪ್, ಇ-ಮೇಲ್ ಅಕೌಂಟ್ ತೆರೆಯಬೇಕು. ಈಗಾಗಲೇ ಖಾತೆ ಇರುವವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಬೇಕು ಎಂದು ತಿಳಿಸಿದ್ದಾರೆ.

ಬೂತ್‌ಮಟ್ಟದಿಂದ ಹಿಡಿದು ಪ್ರದೇಶ ಕಾಂಗ್ರೆಸ್ ಸಮಿತಿವರೆಗೆ ಯುವ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗ ಸಂಸ್ಥೆಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಬೇಕು. ಈ ಮೂಲಕ ರಾಜ್ಯಾದ್ಯಂತ ಕಾಂಗ್ರೆಸ್ ಪರವಾಗಿರುವ ಮತದಾರರ ಒಲವನ್ನು ಹಾಗೂ ಅಲೆಯನ್ನು ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಪರ ಕಾಯ್ದುಕೊಂಡು ರಾಜ್ಯದಲ್ಲಿ ಪುನಃ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗಳಿಸುವಂತೆ ಮಾಡಬೇಕು ಎಂದು ಪರಮೇಶ್ವರ್ ಸೂಚಿಸಿದ್ದಾರೆ.

ಪ್ರತಿಪಕ್ಷಗಳು ನಮ್ಮ ಪಕ್ಷ ಹಾಗೂ ನಾಯಕರ ಬಗ್ಗೆ ಅಪಪ್ರಚಾರ ಮಾಡಿದರೆ ನಾವು ಸಹ ಸಾಮಾಜಿಕ ಜಾಲತಾಣಗಳ ಮೂಲಕವೇ ಉತ್ತರ ನೀಡಬೇಕು. ಸಾಮಾಜಿಕ ಜಾಲತಾಣ ಎಲ್ಲಾ ಜನರನ್ನೂ ಬಹಳ ಬೇಗ ತಲುಪುವ ಸಂವಹನ ಕೇಂದ್ರಗಳಾಗಿವೆ. ಹೀಗಾಗಿ 2013ರ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಜನತೆಗೆ ನೀಡಿದ ಭರವಸೆಗಳು ಹಾಗೂ ಅವುಗಳ ಅನುಷ್ಠಾನವನ್ನು ಬೂತ್ ಮಟ್ಟದ ಮತದಾರರವರೆಗೆ ತಲುಪಿಸಬೇಕು.

ಇದಕ್ಕಾಗಿ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ತಂಡವನ್ನು ರಚನೆ ಮಾಡಬೇಕು ಎಂದು ಪರಮೇಶ್ವರ್ ಸೂಚನೆ ನೀಡಿದ್ದಾರೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೆಪಿಸಿಸಿ ವಿವಿಧ ಪದಾಧಿಕಾರಿಗಳು ಕೃಷಿ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.