Asianet Suvarna News Asianet Suvarna News

ಇವರಿಗೆ ಇಲ್ಲ ಕೆಪಿಸಿಸಿ ಅಧ್ಯಕ್ಷ ಪಟ್ಟ

ಮುಂದೆ ಲೋಕಸಭೆ ಚುನಾವಣೆಯಂತಹ ಸವಾಲಿನ ಸ್ಥಿತಿಯಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಬೇಕು  ಎನ್ನುವ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ನಿರ್ಧರಿಸಲಾಗಿದೆ.

Congress leaders lobby for KPCC President Post

ಬೆಂಗಳೂರು :  ಮುಂದೆ ಲೋಕಸಭೆ ಚುನಾವಣೆಯಂತಹ ಸವಾಲಿನ ಸ್ಥಿತಿಯಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಿರಿಯರು ಹಾಗೂ ಸಂಸದರಿಗೆ ನೀಡಬೇಕು ಎಂದು ಹೈಕಮಾಂಡ್‌ ಬಳಿ ವಾದ ಮಂಡಿಸಲು ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 2019ರ ಲೋಕಸಭಾ ಚುನಾವಣೆ ತಯಾರಿ ಹಾಗೂ ಜೆಡಿಎಸ್‌ನೊಂದಿಗೆ ಘೋಷಣೆಯಾಗಿರುವ ಚುನಾವಣಾ ಪೂರ್ವ ಮೈತ್ರಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಂಸದರಾದ ಮಲ್ಲಿಕಾರ್ಜುನ ಖರ್ಗೆ, ಮುದ್ದಹನುಮೇಗೌಡ, ಬಿ.ವಿ.ನಾಯಕ್‌, ಬಿ.ಎನ್‌.ಚಂದ್ರಪ್ಪ ಅವರು ಸಭೆಗೆ ಗೈರಾಗಿದ್ದುದು ಕುತೂಹಲ ಕೆರಳಿಸಿತ್ತು.

ಸಭೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ತೀವ್ರಗೊಂಡಿದ್ದು, ಕಿರಿಯರಾದವರಿಗೆ ಅವಕಾಶ ನೀಡಬಾರದು. ಸಂಸದರಿಗೆ ಅವಕಾಶ ನೀಡಬೇಕು. ಅಧ್ಯಕ್ಷ ಸ್ಥಾನದ ಆಯ್ಕೆ ವೇಳೆ ಸಂಸದರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ವಾದ ಮಂಡಿಸಲಾಯಿತು. ಅದಕ್ಕೆ ಅಂಗೀಕಾರವೂ ದೊರೆಯಿತು. ಸದ್ಯ ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಕೃಷ್ಣ ಬೈರೇಗೌಡ ಹಾಗೂ ದಿನೇಶ್‌ ಗುಂಡೂರಾವ್‌ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವಕರಿಗೆ ಅವಕಾಶ ನೀಡಬಾರದು. ಅಧ್ಯಕ್ಷ ಸ್ಥಾನದ ಆಯ್ಕೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಸಂಸದರು ಹಾಗೂ ರಾಜ್ಯಸಭಾ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ ಮಾಡಬೇಕು. ಈ ಬಗ್ಗೆ ಕೇಂದ್ರ ಕಾಂಗ್ರೆಸ್‌ ಸಮಿತಿ ಸದಸ್ಯರಿಗೂ ಮಾಹಿತಿ ನೀಡಬೇಕು ಎಂಬುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.

ಬಂಡಾಯದ ಬಗ್ಗೆ ಗಮನ ಕೊಡಿ:  ಈ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಅವರು, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಗಳ ಬಗ್ಗೆ ಸಂಸದರು ಹೆಚ್ಚು ಗಮನ ನೀಡಬೇಕು. ಕ್ಷೇತ್ರಗಳಲ್ಲಿನ ಬಂಡಾಯ ಬಗೆಹರಿಸಿ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನ ಗೆಲ್ಲಬೇಕಾದ ಅನಿವಾರ್ಯತೆ ಇದೆ. ವಿಧಾನಸಭೆ ಚುನಾವಣೆ ಸೋಲಿನಿಂದ ಹೈಕಮಾಂಡ್‌ ಅತೃಪ್ತವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕೈ ಬಲಪಡಿಸಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ರಣತಂತ್ರ ರೂಪಿಸಬೇಕಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಸವಿವರವಾಗಿ ಚರ್ಚಿಸಲಾಗುವುದು ಎಂದು ಹೇಳಿದರು ಎಂದು ತಿಳಿದುಬಂದಿದೆ.

 ಕಾಂಗ್ರೆಸ್‌ ಪ್ರಾಬಲ್ಯದ ಲೋಕಸಭೆ ಕ್ಷೇತ್ರ ಜೆಡಿಎಸ್‌ ಕೊಡಬೇಡಿ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಚುನಾವಣಾ ಪೂರ್ವ ಮೈತ್ರಿಗೆ ನಿರ್ಧರಿಸಿವೆ. ಇದರಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡಬಾರದು. ಜೆಡಿಎಸ್‌ ಪಕ್ಷವು ಶಿವಮೊಗ್ಗ ಸೇರಿದಂತೆ ಕಾಂಗ್ರೆಸ್‌ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದೆ. ಹೀಗಾಗಿ, ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಬಳಿಕ ಯಾವ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಅವರಿಗೆ ಬಿಟ್ಟುಕೊಡುವುದಕ್ಕೂ ಮೊದಲು ಹಲವು ಹಂತಗಳಲ್ಲಿ ಚರ್ಚೆಗಳು ನಡೆಯಬೇಕು ಎಂದು ಸಂಸದರು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಕ್ಷೇತ್ರಗಳ ಹಂಚಿಕೆ ಏಕಾಏಕಿ ನಡೆಯುವುದಿಲ್ಲ. ನಿಮ್ಮೆಲ್ಲಾ ಅಭಿಪ್ರಾಯಗಳನ್ನು ಹೈಕಮಾಂಡ್‌ ಗಮನಕ್ಕೆ ತರಲಾಗುವುದು. ಕ್ಷೇತ್ರಗಳ ಹಂಚಿಕೆಗೆ ಮೊದಲು ಎಲ್ಲಾ ಹಂತದಲ್ಲೂ ಸಭೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು ಎಂದು ತಿಳಿದುಬಂದಿದೆ. 

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಸಂಸದರ ಅಭಿಪ್ರಾಯವನ್ನು ಪರಿಗಣಿಸಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಯಾರಿ ಹಾಗೂ ಅಸಮಾಧಾನಿತ ಶಾಸಕರನ್ನು ಸಮಾಧಾನಪಡಿಸುವ ಬಗ್ಗೆ ಚರ್ಚೆಯಾಗಿದೆ. ಆದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಹೈಕಮಾಂಡ್‌ಗೆ ಬಿಟ್ಟದ್ದು. ಅವರಿಗೆ ನಿಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದೇನೆ.

- ಡಾ. ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ

Follow Us:
Download App:
  • android
  • ios