ಲೋಕಾಯುಕ್ತ ನ್ಯಾಯಾಲಯ ಮಾ15ಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ
ಬೆಂಗಳೂರು(ಫೆ.21):ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಮಾ.15ಕ್ಕೆ ಖುದ್ದು ವಿಚಾರಣೆಗೆ ಹಾಜರಾಗಬೇಕೆಂದು ಲೋಕಾಯುಕ್ತ ನ್ಯಾಯಾಲಯ ಸೂಚಿಸಿದೆ. ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ವಿನೋದ್ ಎಂಬುವರು ಸಲ್ಲಿಸಿದ ಖಾಸಗಿ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಮಾ15ಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.
ವಾದ-ಪ್ರತಿವಾದ ಆಲಿಸಿದ ಲೋಕಾಯುಕ್ತ ವಿಶೇಷ ಕೋರ್ಟ್ನ ನ್ಯಾಯಾಧೀಶ ಗೋಪಾಲ್ ಅಂದೆ ವಿಚಾರಣೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಸಹ ಒದಗಿಸಬೇಕೆಂದು ದೂರುದಾರ ಪರ ವಕೀಲ ವಿನೋದ್ ಎಂಬುವರಿಗೆ ಸೂಚಿಸಿದೆ.. ಇನ್ನು ಈ ಹಿಂದೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ವಕೀಲ ವಿನೋದ್ ಅವರು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆಸುವಂತೆ ಸೂಚನೆ ನೀಡಿತ್ತು. ಅದರಂತೆ ಇಂದು ದೂರುದಾರರು ಮತ್ತು ಆರೋಪಿಗಳು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನ್ಯಾಯಾಲಯ ಸೂಚನೆ ನೀಡಿತ್ತು. ಆದ್ರೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ದಂಪತಿ ವಿಚಾರಣೆಗೆ ಹಾಜರಾಗಿರಲಿಲ್ಲ.
