ಗಾಂಧೀನಗರ[ಜೂ.13]: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿದ್ದ ಚಂಡಮಾರುತ 'ವಾಯು' ತನ್ನ ಪಥ ಬದಲಿಸಿದ್ದು, ಗುಜರಾತ್‌ ಕರಾವಳಿಗೆ ಅಪ್ಪಳಿಸುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೂ ಗುಜರಾತ್ ಸೇರಿದಂತೆ ದೇಶದ ಪಶ್ಚಿಮ ಕರಾವಳಿಯುದ್ದಕ್ಕೂ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 155 ರಿಂದ 165 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕಟ್ಟೆಚ್ಚರ ವಹಿಸಲಾಗಿದೆ.

ಕರಾವಳಿಯಲ್ಲಿ ಭಾರಿ ಮಳೆ : ತುಂಬಿದ ನೇತ್ರಾವತಿಯ ಒಡಲು

ಗುಜರಾತ್ ನ ಪೋರಬಂದರು, ಮಹುವಾ ಹಾಗೂ ಇತರ ಭಾಗದಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದ್ದು, 2.30 ಲಕ್ಷ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ಭಾರತೀಯ ಕರಾವಳಿ ಕಾವಲು ಪಡೆ, ನೌಕಾ ಪಡೆ, ಭೂ ಸೇನೆ ಮತ್ತು ವಾಯು ಪಡೆ ರಕ್ಷಣಾ ಕಾರ್ಯಕ್ಕೆ ನೆರವಾಗಲು ಸನ್ನದ್ಧವಾಗಿದೆ. 

ವಾಯು ಚಂಡಮಾರುತದ ಪರಿಣಾಮ ರಾಜ್ಯದ ಮಂಗಳೂರು, ಉಡುಪಿ, ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಹಾರಾಷ್ಟ್ರ, ಕರ್ನಾಟಕ ಸಮುದ್ರ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.