ಬೆಂಗಳೂರು (ಜೂ.13) :  ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. 

ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವುದಲ್ಲದೇ ಬೆತ್ತಲೆ ಮೆರವಣಿಗೆ ನಡೆಸಿರುವುದು ಅತ್ಯಂತ ಅಮಾನವೀಯ. ಸಮಾಜದಲ್ಲಿ ಜಾತಿ-ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರವಾಗಿದೆ. ಇಂತಹ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಟ್ವೀಟರ್‌ನಲ್ಲಿ ಘಟನೆಯನ್ನು ಖಂಡಿಸಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸಹ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ನಮ್ಮದು ಶಾಂತಿ ಮತ್ತು ಸೌಹಾರ್ದಯುತ ರಾಜ್ಯ. ಆದರೆ, ಇಲ್ಲಿ ಇಂತಹ ಪ್ರಕರಣ ನಡೆದಿದೆ ಎಂದರೆ ನಿಜಕ್ಕೂ ನಾಚಿಕೆಯಾಗಬೇಕು. ಇಷ್ಟುದಿನ ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯದಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿದ್ದವು. ಈಗ ನಮ್ಮ ರಾಜ್ಯದಲ್ಲಿ ಇಂತಹ ಪ್ರಕರಣ ನಡೆದಿದೆ. ನಮ್ಮ ರಾಜ್ಯ ಕೂಡ ಬೇರೆ ರಾಜ್ಯದ ರೀತಿಯಂತೆ ಆಗಬೇಕಾ ಎಂದು ಅವರು ಕಿಡಿಕಾರಿದರು.

ಪ್ರಕರಣದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದೇ ವೇಳೆ ಬೇರೆ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಎಚ್ಚರಿಕೆ ನೀಡಿದರು. ಮುಂದಿನ ದಿನದಲ್ಲಿ ಯಾವುದೇ ಜಿಲ್ಲೆಯಲ್ಲಿ ಇಂತಹ ಪ್ರಕರಣ ನಡೆದರೂ ಅದಕ್ಕೆ ಅಲ್ಲಿನ ಜಿಲ್ಲಾಧಿಕಾರಿಯೇ ಹೊಣೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಪರಮೇಶ್ವರ್‌ ಹೇಳಿದರು.

ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್‌ ದೇವಸ್ಥಾನ ಪ್ರವೇಶಿಸಿದ ಎಂಬ ಕಾರಣಕ್ಕೆ ಆತನ ಮೇಲೆ ತೀವ್ರ ಹಲ್ಲೆ ಮಾಡಿ, ಆತನನ್ನು ವಿವಸ್ತ್ರಗೊಳಿಸಿ ರಸ್ತೆಯ ಮೇಲೆ ಪ್ರಾಣಿಗಳಂತೆ ಎಳೆದಾಡಲಾಗಿತ್ತು.