Asianet Suvarna News Asianet Suvarna News

ಪರಂ-ರಾಹುಲ್‌ ಭೇಟಿ : ಮಹತ್ವದ ವಿಚಾರ ಚರ್ಚೆ

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌  ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಕೆಲಕಾಲ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. 

DCM Parameshwar Meet Rahul Gandhi

ನವದೆಹಲಿ :  ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಶನಿವಾರ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಈ ಭೇಟಿ ವೇಳೆ ತಮ್ಮನ್ನು 8 ವರ್ಷ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಾಲಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಧನ್ಯವಾದ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ರಾಹುಲ್‌ ಗಾಂಧಿ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಕೆಪಿಸಿಸಿಯ ನೂತನ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಅಧಿಕಾರ ಹಸ್ತಾಂತರ ಮಾಡುವ ಮೊದಲು ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗುವ ಇರಾದೆಯಿಂದ ದೆಹಲಿಗೆ ಆಗಮಿಸಿದ್ದೇನೆ ಎಂದರು.

ಸ್ಥಾನ ಹಂಚಿಕೆ ಬಗ್ಗೆ ಚರ್ಚಿಸಿಲ್ಲ:  ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ, ವಿಧಾನ ಪರಿಷತ್‌ನ ಸಭಾಪತಿ ಸ್ಥಾನ ಮುಂತಾದ ಅಂಶಗಳ ಕುರಿತು ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಿಲ್ಲ. ಇಂತಹ ವಿಷಯಗಳ ಬಗ್ಗೆ ರಾಜ್ಯದ ಉಸ್ತುವಾರಿ ಹಾಗೂ ಪ್ರಧಾನ ಕಾರ್ಯದರ್ಶಿಗಳ ಉಪಸ್ಥಿತಿಯಲ್ಲಿಯೇ ಚರ್ಚೆ ನಡೆಸಬೇಕು. ಹಾಗೆಯೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿಯ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅನುಪಸ್ಥಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿನ ಪ್ರಚಲಿತ ರಾಜಕೀಯ ಸ್ಥಿತಿಗತಿಯ ಬಗ್ಗೆ ಮತ್ತು ಲೋಕಸಭೆ ಚುನಾವಣಾ ತಯಾರಿಯ ಬಗ್ಗೆ ಚರ್ಚೆ ನಡೆಸಲಾಯಿತು. ಆದರೆ ಯಾವುದೇ ಒಂದು ನಿರ್ದಿಷ್ಟವಿಷಯದತ್ತ ಕೇಂದ್ರೀಕರಿಸಿ ಚರ್ಚೆ ನಡೆಸಲಾಗಿಲ್ಲ ಎಂದರು. ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ಸಾಗಬೇಕೆಂದು ರಾಹುಲ್ ಗಾಂಧಿ ಸೂಚಿಸಿದ್ದು, ಇದಕ್ಕೆ ಪೂರಕವಾಗಿ ಕೆಲವು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

Follow Us:
Download App:
  • android
  • ios