ಬೆಂಗಳೂರು :  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ಸರ್ವಪಕ್ಷ ನಾಯಕರ ನಿಯೋಗ ಪ್ರಧಾನ ಮಂತ್ರಿ ಮತ್ತು ವಿವಿಧ ಕೇಂದ್ರ ಸಚಿವರನ್ನು ಭೇಟಿಯಾಗಿ ನೆರೆ, ಬರ ಪರಿಹಾರ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ನೆರವು ಕೋರಲು ಭಾನುವಾರ ದೆಹಲಿಗೆ ತೆರಳಲಿದೆ.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಪ್ರತಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ನಾಯಕರೊಂದಿಗೆ ನಿಯೋಗ ತೆರಳಿರುವ ಮುಖ್ಯಮಂತ್ರಿ ಅವರು, ಸೋಮವಾರ ಬೆಳಗ್ಗೆ ಪ್ರದಾನಿ ನರೇಂದ್ರ ಮೋದಿ, ಹಣಕಾಸು ಸಚಿವ ಅರುಣ್‌ ಜೇಟ್ಲಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿ ಇತ್ತೀಚೆಗೆ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದ ಕೊಡಗು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉಂಟಾಗಿರುವ ನೆರೆ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರದ ಬಗ್ಗೆ ವರದಿ ನೀಡಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಲಿದ್ದಾರೆ.

ಕೊಡುಗು ನೆರೆಯಿಂದ ಸಂಪೂರ್ಣ ಹಾಳಾಗಿದ್ದು, ಪುನರ್‌ ನಿರ್ಮಾಣ ಮಾಡಲು 3000 ಕೋಟಿ ರು.ಅಗತ್ಯವಿದ್ದು, ಈಗಾಗಲೇ 2000 ಕೋಟಿ ರು.ಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪರಿಹಾರ ಕೇಂದ್ರದಿಂದ ಬಂದಿಲ್ಲ. ಆದಷ್ಟುಬೇಗ ಪರಿಹಾರ ಬಿಡುಗಡೆ ಮಾಡುವಂತೆ ನಿಯೋಗ ಕೋರಲಿದೆ. ಅದೇ ರೀತಿ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಅಗತ್ಯ ನೆರವಿನ ಸಹಕಾರ ನೀಡುವಂತೆ ನಿಯೋಗದ ನಾಯಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

ನಿಯೋಗದಲ್ಲಿ ಯಾರಾರ‍ಯರು?:  ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗದಲ್ಲಿ ಮಾಜಿ ಪ್ರಧಾನಿ ದೇವೆಗೌಡ, ಕೇಂದ್ರ ಸಚಿವರಾದ ಅನಂತಕುಮಾರ್‌, ಸದಾನಂದಗೌಡ, ನಿರ್ಮಲಾ ಸೀತಾರಾಮನ್‌, ರಮೇಶ್‌ ಜಿಗಜಿಣಗಿ, ಅನಂತಕುಮಾರ ಹೆಗಡೆ, ಲೋಕಸಭೆ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸಪೂಜಾರಿ, ಉಪಮುಖ್ಯಮಂತ್ರಿ ಡಾ.ಪರಮೇಶ್ವರ್‌, ಸಚಿವರಾದ ಎಚ್‌.ಡಿ.ರೇವಣ್ಣ, ಆರ್‌.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್‌ ಮತ್ತು ಕೃಷ್ಣ ಬೈರೇಗೌಡ ಇರಲಿದ್ದಾರೆ. ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್‌ ಕುಮಾರ್‌ ಕಟೀಲ್‌, ಪ್ರತಾಪ್‌ ಸಿಂಹ ಕೂಡ ಜೊತೆಯಾಗಲಿದ್ದಾರೆ.