ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ ಸಿಬಿಐ ಒಳಜಗಳ! ಆಸ್ಥಾನಾ ವಿರುದ್ಧದ ಕ್ರಿಮಿನಲ್ ಪ್ರಕರಣ ಯಥಾಸ್ಥಿತಿ! ಸಿಬಿಐಗೆ ಸ್ಪಷ್ಟ ಸೂಚನೆ ನೀಡಿದ ದೆಹಲಿ ಹೈಕೋರ್ಟ್! ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದ ಆಸ್ಥಾನಾ! ಅಕ್ಟೋಬರ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದ ಹೈಕೋರ್ಟ್ 

ನವದೆಹಲಿ(ಅ.23): ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ದೆಹಲಿ ಹೈಕೋರ್ಟ್ ಸಿಬಿಐಗೆ ಆದೇಶಿಸಿದೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ರಾಕೇಶ್ ಆಸ್ಥಾನಾ ಅವರು ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ತಮ್ಮನ್ನು ಬಂಧಿಸದಂತೆ ಮತ್ತು ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

ರಾಕೇಶ್ ಆಸ್ಥಾನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಜಿಮ್ ವಜಿರಿ, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಿಬಿಐಗೆ ಸೂಚಿಸಿದ್ದಾರೆ. ಅಲ್ಲದೆ ವಿಶೇಷ ನಿರ್ದೇಶಕರ ವಿರುದ್ಧ ನಡೆಯುತ್ತಿರುವ ತನಿಖೆಗೆ ಯಾವುದೇ ತಡೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Scroll to load tweet…

ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರಿಗೆ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೂ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ನೋಟಿಸ್ ನೀಡಿ, ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.