ಬೆಂಗಳೂರು :  ನೇರ ನೇಮಕಾತಿ ಮೂಲಕ 724 ನರ್ಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಲಾಖೆಯ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ನರ್ಸ್‌ಗಳ ಕೊರತೆ ಎದುರಾಗಿದೆ. ಹೀಗಾಗಿ ಮೊದಲ ಹಂತದಲ್ಲಿ 724 ಹುದ್ದೆಗಳಿಗೆ ನರ್ಸ್‌ಗಳನ್ನು ನೇಮಕ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶೀಘ್ರದಲ್ಲಿಯೇ ನೇಮಕಾತಿ ಆದೇಶವು ಹೊರಬೀಳಲಿದೆ ಎಂದು ಹೇಳಿದರು.

ಪ್ರಕೃತಿ ವಿಕೋಪ ಎದುರಿಸುತ್ತಿರುವ ಕೊಡಗು ಜಿಲ್ಲೆಗೆ ತುರ್ತು ಸೇವೆ ಒದಗಿಸಲು ಇಲಾಖೆಯ ವೈದ್ಯರ ತಂಡ ಸಜ್ಜಾಗಿದೆ. ಅಗತ್ಯ ಬಿದ್ದರೆ ಕಳುಹಿಸಲಾಗುವುದು. ಈಗಾಗಲೇ ವೈದ್ಯರ ತಂಡವೊಂದು ತೆರಳಿ ಕಾರ್ಯನಿರ್ವಹಿಸುತ್ತಿದೆ. ಖಾಸಗಿ ಮತ್ತು ಸರ್ಕಾರಿ ವೈದ್ಯರಿಗೆ ಸಿದ್ಧರಿರುವಂತೆ ಸೂಚಿಸಲಾಗಿದೆ. ಅಗತ್ಯ ಎನಿಸಿದಾಗ ಅವರನ್ನು ಕೊಡಗಿಗೆ ಕಳುಹಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.