ಶಿವಮೊಗ್ಗ[ಮೇ.12]: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ತಾಕತ್ತಿದ್ದರೆ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಪ್ರಯತ್ನಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಚೇಲಾ ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಅತಂತ್ರ ಮಾಡುವ ದಿಕ್ಕಿನಲ್ಲಿ ಕಾಂಗ್ರೆಸ್‌ನ ಕೆಲ ಶಾಸಕರುಗಳೇ ಪ್ರಯತ್ನ ನಡೆಸುತ್ತಿದ್ದಾರೆ. ಅಧಿಕಾರದ ಲಾಲಸೆಯಿಂದ ಕೆಲವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ. ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ನಮಗೆ 104 ಸೀಟುಗಳಿವೆ. ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.