ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಶ್ರೀಗಳ ಹೆಸರು ರಾಜಕೀಯಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಯಾದಗಿರಿ/ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಶ್ರೀಗಳ ಹೆಸರು ರಾಜಕೀಯಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದಲ್ಲಿ ಅನೇಕ ರಾಜಕಾರಣಿಗಳು, ಮುಖಂಡರಿದ್ದಾರೆ. ಲಿಂಗಾಯತ ಧರ್ಮದ ವಿಚಾರವನ್ನು ಅವರೇ ಬಗೆಹರಿಸಿ ಕೊಳ್ಳಬೇಕು. ಈ ವಿಷಯದಲ್ಲಿ ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಲಿಂಗಾಯತ ವಿವಾದ ಅಂತ್ಯ: ಶರಣ ಪ್ರಕಾಶ್
ಪ್ರತ್ಯೇಕ ಧರ್ಮ ರಚನೆ ಸಂಬಂಧದ ಗೊಂದಲ ನಿವಾರಣೆಗೆ ತಜ್ಞರ ಸಮಿತಿ ರಚನೆಗೆ ನಿರ್ಧರಿಸಲಾಗಿದ್ದು, ವೀರಶೈವ-ಲಿಂಗಾಯತ ವಿವಾದ ಈಗ ಮುಗಿದ ಅಧ್ಯಾಯ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಂತ್ರ ಧರ್ಮವಾಗಬೇಕು ಎಂಬ ಬಗ್ಗೆ ಸ್ಪಷ್ಟತೆ ಇದೆ. ಆದರೆ ಯಾವ ಹೆಸರಿನಲ್ಲಿ ಧರ್ಮವಾಗಬೇಕು ಎಂಬ ಬಗ್ಗೆ ಸಮಿತಿಯ ನಿರ್ಣಯದಂತೆ ಮುಂದುವರಿಯಲಾಗುವುದು ಎಂದು ಹೇಳಿದರು.
