ವಾಷಿಂಗ್ಟನ್‌[ಜು.23]: ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ತಾವು ಸಿದ್ಧ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ.

ಅಮೆರಿಕ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌, ಸೋಮವಾರ ಇಲ್ಲಿ ಟ್ರಂಪ್‌ ಅವರನ್ನು ಭೇಟಿ ಮಾಡಿದರು. ಈ ವೇಳೆ ಉಪಖಂಡದಲ್ಲಿ ಶಾಂತಿ ಮರುಸ್ಥಾಪನೆಗೆ ಸಹಕರಿಸುವಂತೆ ಕೋರಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಟ್ರಂಪ್‌, ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡಾ ವಿವಾದಿತ ಕಾಶ್ಮೀರ ವಿಷಯ ಸಂಬಂಧ ನೆರವು ನೀಡುವಂತೆ ಕೋರಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ವಿಶೇಷವೆಂದರೆ ಈ ಹಿಂದಿನಿಂದಲೂ ಕಾಶ್ಮೀರ ಒಂದು ವಿವಾದವೇ ಅಲ್ಲ. ಹೀಗಾಗಿ ವಿಶ್ವಸಂಸ್ಥೆ ಸೇರಿದಂತೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಭಾರತ ಪ್ರತಿಪಾದಿಸಿಕೊಂಡೇ ಬಂದಿದೆ. ಹೀಗಾಗಿರುವ ಇದೀಗ ಪಾಕಿಸ್ತಾನ ಬೇಡಿಕೆಯನ್ನು ಒಪ್ಪಿಕೊಂಡು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡಿರುವ ಹೇಳಿಕೆ ಸಾಕಷ್ಟುಕುತೂಹಲಕ್ಕೆ ಕಾರಣವಾಗಿದೆ.

ಏನೇ ಆದರೂ ಡೊನಾಲ್ಡ್‌ ಟ್ರಂಪ್‌ರ ಈ ಆಫರ್‌ ಅನ್ನು ಭಾರತ ತಿರಸ್ಕರಿಸುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ.