ಬೆಂಗಳೂರು [ಸೆ.09] :  ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಕಿರುಕುಳ ನೀಡುತ್ತಿರುವ ಹಾಗೂ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಸರ್ವಶಿಕ್ಷಾ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಯಾರಿಗೇ ಆಗಲಿ ಅಧಿಕಾರ ಇರುವುದು ಸಮುದಾಯಕ್ಕೆ ತನ್ನದೇ ಆದ ರೀತಿಯಲ್ಲಿ ಸಹಾಯ, ಸಹಕಾರ ನೀಡಿ ರಾಷ್ಟ್ರನಿರ್ಮಾಣಕ್ಕೆ ಶ್ರಮಿಸಲು. ಆದರೆ, ಇಲಾಖೆಯ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳಬೇಕಾದ ಅಧಿಕಾರವನ್ನು ಸಿಬ್ಬಂದಿ, ಶಿಕ್ಷಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸಲು ಬಳಸಿಕೊಳ್ಳುವುದು ಸರ್ವಥಾ ಸಲ್ಲ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾವು ರಾಜ್ಯದ ವಿವಿಧೆಡೆ ಪ್ರವಾಸ ಮಾಡಿದ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಹಾಗೂ ಶಿಕ್ಷಕರಿಂದ ಇಂತಹ ಆರೋಪಗಳು, ದೂರುಗಳು ಕೇಳಿಬಂದಿವೆ. ಇಂತಹ ತಪ್ಪುಗಳು ಮರುಕಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ದೂರುಗಳು ಮುಂದಿನ ದಿನಗಳಲ್ಲಿ ಬಾರದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.