ರಾಜ್ಯ ಸರ್ಕಾರದ ಜನಪರ ಯೋಜನೆ ‘ಮುಖ್ಯಮಂತ್ರಿ ಅನಿಲಭಾಗ್ಯ’ದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನ.20ರೊಳಗೆ ಅಂತಿಮಪಡಿಸಿ, ಎಲ್ಲ ಫಲಾನುಭವಿಗಳಿಗೆ ಡಿ.15ರೊಳಗೆ ಅನಿಲ ಸಂಪರ್ಕವನ್ನು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ: ರಾಜ್ಯ ಸರ್ಕಾರದ ಜನಪರ ಯೋಜನೆ ‘ಮುಖ್ಯಮಂತ್ರಿ ಅನಿಲಭಾಗ್ಯ’ದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನ.20ರೊಳಗೆ ಅಂತಿಮಪಡಿಸಿ, ಎಲ್ಲ ಫಲಾನುಭವಿಗಳಿಗೆ ಡಿ.15ರೊಳಗೆ ಅನಿಲ ಸಂಪರ್ಕವನ್ನು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗಾಗಿ ರೂಪಿಸಿರುವ ಇನ್ನೊಂದು ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಪ್ರತಿ ಫಲಾನುಭವಿಗೆ 4040 ರು. ಮೌಲ್ಯದ ಅನಿಲ ಸಂಪರ್ಕ ದೊರೆಯಲಿದೆ. ಹಾಗಾಗಿ ಅರ್ಹರಿಗೆ ಈ ಯೋಜನೆಯನ್ನು ತಲುಪಿಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯವನ್ನು ಪರಿಸರ ಸ್ನೇಹಿಯನ್ನಾಗಿ ಮಾಡಲು ಆಹಾರ ಇಲಾಖೆ, ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಿಂದ ಒಟ್ಟು 34763 ಮನೆಗಳಲ್ಲಿ, ಪ್ರಥಮ ಹಂತದಲ್ಲಿ 11,059 ಮನೆಗಳ ಪಟ್ಟಿಯನ್ನು ತಯಾರಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ 3484, ಕುಂದಾಪುರದಲ್ಲಿ 2245, ಉಡುಪಿಯಲ್ಲಿ 874, ಕಾಪುವಿನಲ್ಲಿ 1563, ಕಾರ್ಕಳದಲ್ಲಿ 2893 ಫಲಾನುಭವಿಗಳ ಗುರಿ ನಿಗದಿ ಪಡಿಸಲಾಗಿದೆ ಎಂದವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ, ಜಿ.ಪಂ. ಸದಸ್ಯರಾದ ಜನಾರ್ದನ ತೋನ್ಸೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಎಂ.ಆರ್. ಭಟ್ ಉಪಸ್ಥಿತರಿದ್ದರು.