ಅಶೋಕ ಖೇಣಿ ಅವರನ್ನು ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್‌ ಪಕ್ಷ ಬಹಿರಂಗವಾಗಿ ರಾಜಕೀಯ ವ್ಯಭಿಚಾರ ಮಾಡಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಟೀಕಿಸಿದ್ದಾರೆ.
ವಿಜಯಪುರ: ಅಶೋಕ ಖೇಣಿ ಅವರನ್ನು ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಬಹಿರಂಗವಾಗಿ ರಾಜಕೀಯ ವ್ಯಭಿಚಾರ ಮಾಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸ್ ಕಂಪನಿಯನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡಿಲ್ಲ, ಅಶೋಕ ಖೇಣಿ ಅವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಪರಮೇಶ್ವರ್ ಅವರು ಹೇಳಿರುವುದು ಹಾಸ್ಯಾಸ್ಪದವಾಗಿದೆ.
ಕಾಂಗ್ರೆಸ್ ಪಕ್ಷ ಏನು ಮಾಡುತ್ತಿದೆ ಎಂಬುದನ್ನು ಇಡೀ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದರು. ಖೇಣಿ ನೈಸ್ ಕಂಪನಿ ಮೂಲಕ ವ್ಯಾಪಕ ಭ್ರಷ್ಟಾಚಾರ ಮಾಡಿರುವುದರ ಬಗ್ಗೆ ಸ್ವತಃ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸದನ ಸಮಿತಿಯಲ್ಲಿ ವರದಿ ನೀಡಿದ್ದರು. ಆದರೂ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಹಿರಂಗ ರಾಜಕೀಯ ವ್ಯಭಿಚಾರಕ್ಕೆ ಕಾಂಗ್ರೆಸ್ ಮುನ್ನುಡಿ ಬರೆದಿದೆ ಎಂದು ಆರೋಪಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ಸೋಲುತ್ತಿದೆ. ಕ್ರಿಶ್ಚಿಯನ್ನರೇ ಹೆಚ್ಚಿರುವ ಈಶಾನ್ಯ ರಾಜ್ಯಗಳಲ್ಲೂ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ ಕಾಲಿಟ್ಟಕಡೆಯಲ್ಲೆಲ್ಲ ಬಿಜೆಪಿ ಗೆಲ್ಲುತ್ತಿದೆ.
-ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ.
