Asianet Suvarna News Asianet Suvarna News

ಸಾಲ ಮನ್ನಾ: ರೈತರ ಜತೆ ಇಂದು ಸಿಎಂ ಸಭೆ

ರೈತರ ಸಾಲ ಮನ್ನಾ, ರೈತರ ಆತ್ಮಹತ್ಯೆ ಮತ್ತು ಕೃಷಿಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಮಹತ್ವದ ಸಭೆ ನಡೆಸಲಿದ್ದಾರೆ.

Farm loan waiver: CM calls meeting with farmers today

ಬೆಂಗಳೂರು :  ರೈತರ ಸಾಲ ಮನ್ನಾ, ರೈತರ ಆತ್ಮಹತ್ಯೆ ಮತ್ತು ಕೃಷಿಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಮಹತ್ವದ ಸಭೆ ನಡೆಸಲಿದ್ದಾರೆ.

ಸಾಲ ಮನ್ನಾ ಘೋಷಣೆಗೆ ಪೂರಕವಾಗಿ ರೈತರಿಂದ ಅಭಿಪ್ರಾಯ ಸಂಗ್ರಹಿಸುವುದು ಹಾಗೂ ಸಾಲ ಮನ್ನಾ ಬಗ್ಗೆ ತಮ್ಮ ಬದ್ಧತೆಯನ್ನು ನೇರವಾಗಿ ತಿಳಿಸುವುದೂ ಈ ಸಭೆಯ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ರಾಜ್ಯದ ಪ್ರತಿ ಜಿಲ್ಲೆಯಿಂದ ಕನಿಷ್ಠ ನಾಲ್ವರು ಪ್ರತಿನಿಧಿಗಳಂತೆ ರೈತ ಸಂಘಟನೆಗಳ ಮುಖಂಡರು ಮತ್ತು ಪ್ರಗತಿಪರ ರೈತರು ಸೇರಿದಂತೆ 150 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಬಹುಮತ ಸಾಬೀತುಪಡಿಸಿದ ಬಳಿಕ ಶುಕ್ರವಾರ ಸಂಜೆ ಕುಮಾರಸ್ವಾಮಿ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಣಕಾಸಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಹಣಕಾಸು ಇಲಾಖೆಯ ಅಧಿಕಾರಿಗಳಿಂದ ಸಂಗ್ರಹಿಸಿರುವ ಮಾಹಿತಿಯನ್ನು ಮುಖ್ಯಮಂತ್ರಿಗಳು ಸಭೆಯ ಮುಂದಿಡುವ ಸಾಧ್ಯತೆ ಇದೆ. ಈ ಅಂಕಿ-ಅಂಶಗಳ ಆಧಾರದ ಮೇಲೆ ಸಾಲಮನ್ನಾ, ಕೃಷಿ ರಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರೈತ ಸಂಘಟನೆಗಳ ಪ್ರಮುಖರು ಮತ್ತು ಪ್ರಗತಿಪರ ರೈತರೊಂದಿಗೆ ಚರ್ಚಿಸಲಿದ್ದಾರೆ. ಈ ವೇಳೆ ರೈತ ಮುಖಂಡರು ರೈತರ ಮತ್ತು ಕೃಷಿ ಸಮಸ್ಯೆಗಳ ಬಗ್ಗೆ ಮಾಹಿತಿಗಳ ವಿವರಣೆ ನೀಡಲಿದ್ದಾರೆ. ಅಲ್ಲದೇ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

ರೈತ ಮುಖಂಡರು ನೀಡಿರುವ ಸಲಹೆಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳ ಮಾಹಿತಿಗಳನ್ನು ಕ್ರೋಢೀಕರಿಸಿ ಸಾಲ ಮನ್ನಾ ಮತ್ತು ಕೃಷಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಈ ಸಭೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ, ಯಡಿಯೂರಪ್ಪ ಅವರು ಭಾಗವಹಿಸುವ ಬಗ್ಗೆ ಸ್ಪಷ್ಟತೆಯಿಲ್ಲ. ರೈತ ಮುಖಂಡರ ಸಭೆಗೆ ಯಡಿಯೂರಪ್ಪ ಅಥವಾ ಅವರ ಪರವಾಗಿ ಬಿಜೆಪಿಯ ಬೇರೊಬ್ಬ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

Follow Us:
Download App:
  • android
  • ios