ಬೆಂಗಳೂರು :  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಂಚಿಕೆಗೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ.

ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನಕ್ಕೆ ಪ್ರಯತ್ನಿಸಿ ವಿಫಲರಾಗಿದ್ದ ಕಾಂಗ್ರೆಸ್ಸಿನ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ ಅವರು ಮುಂಬರುವ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಜೆಡಿಎಸ್‌ ಕೂಡ ಈ ಕ್ಷೇತ್ರವನ್ನು ತನಗೆ ಬಿಟ್ಟುಕೊಡುವಂತೆ ಕೇಳುವ ಸಾಧ್ಯತೆಯಿದ್ದು, ಖುದ್ದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಈಗಿರುವ ಹಾಸನವನ್ನು ತಮ್ಮ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರಿಗೆ ವಹಿಸಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಹೀಗಾಗಿ, ಈ ಕ್ಷೇತ್ರದ ಹಂಚಿಕೆ ಕುರಿತಂತೆ ಮುಂದಿನ ದಿನಗಳಲ್ಲಿ ಉಭಯ ಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಂಭವವಿದೆ ಎಂದು ತಿಳಿದು ಬಂದಿದೆ.

ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರೇವಣ್ಣ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿರುವುದಾಗಿ ಹೇಳಿದರು.

ಕಳೆದ ತಿಂಗಳು ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ನೀಡುವಂತೆ ಪಕ್ಷವನ್ನು ಒತ್ತಾಯಿಸಿದ್ದೆ. ಆದರೆ, ಅವಕಾಶ ಸಿಗಲಿಲ್ಲ. ಇನ್ನೇನು ವಿಧಾನ ಪರಿಷತ್ತಿನ ಸದಸ್ಯಸ್ಥಾನದ ಅವಧಿಯೂ ಮುಗಿಯುತ್ತಾ ಬಂದಿದೆ. ಇದನ್ನು ಗಮನದಲ್ಲಿಟ್ಟುಕೊಂಡು 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಹಾಗಾಗಿ ಪಕ್ಷದ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ನಾಯಕರಲ್ಲಿ ಮನವಿ ಮಾಡಿದ್ದೇನೆ. ಟಿಕೆಟ್‌ ದೊರೆಯುವ ವಿಶ್ವಾಸವಿದೆ. ಅಂತಿಮವಾಗಿ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದರು.

ಚನ್ನಪಟ್ಟಣದಲ್ಲಿ ಎಚ್‌ಡಿಕೆ ಗೆಲುವಿಗೆ ಕಾರಣನಾದೆ:

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಗಡಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್‌ ಕೇಳಿದ್ದೆ. ಆದರೆ, ಪಕ್ಷ ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಸೂಚಿಸಿದ್ದರಿಂದ ಆ ಎರಡೂ ಕ್ಷೇತ್ರಗಳನ್ನು ಬೇರೆಯವರಿಗೆ ಬಿಟ್ಟುಕೊಟ್ಟು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಅಲ್ಲಿ ನಾನು ಗೆಲ್ಲದಿದ್ದರೂ ಜೆಡಿಎಸ್‌ ಅಭ್ಯರ್ಥಿಯ ಗೆಲುವಿಗೆ ಕಾರಣನಾದೆ. ಆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಕುಮಾರಸ್ವಾಮಿಯವರು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಇದೇ ವೇಳೆ ರೇವಣ್ಣ ಹೇಳಿದರು.

ಕಾಂಗ್ರೆಸ್‌ನಲ್ಲಿ ನಿರಂತರವಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದೇನೆ. ಈ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಉಳಿದ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಪ್ರಾಬಲ್ಯವಿದೆ. ಹಾಗಾಗಿ ಈ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಹೊಂದಿದ್ದೇನೆ. ಟಿಕೆಟ್‌ ನೀಡುವ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ ಎಂದರು.