ಬೆಂಗಳೂರು [ಜು.12] :   ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ  ಧಾರಾಕಾರ ಮಳೆಯಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಒಟ್ಟಾರೆ 41 ಗ್ರಾಮಗಳು ಮತ್ತು ಎರಡು ದ್ವೀಪಗಳು ಸಂಪರ್ಕ ಕಡಿದುಕೊಂಡಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆ ಪರಿಣಾಮ ಕೃಷ್ಣಾ, ಮಲಪ್ರಭಾ, ಮಹದಾಯಿ, ಪಾಂಡರಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳಿಗೆ ನೀರು ನುಗ್ಗಲಾರಂಭಿಸಿದೆ. ಆಲಮಟ್ಟಿ ಜಲಾಶಯಕ್ಕೆ ಒಂದೇ ದಿನ 1,24,290 ಕ್ಯುಸೆಕ್ ಒಳಹರಿವು ಹರಿದು ಬಂದಿದೆ. ಪ್ರಸಕ್ತ ಋತುಮಾನದಲ್ಲಾದ ಅತೀ ಹೆಚ್ಚು ಒಳಹರಿವು ಇದಾಗಿದೆ. 

ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ

ಖಾನಾಪುರ ತಾಲೂಕಿನ ಕಾನನದಂಚಿನ ಸುಮಾರು 30 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. 9 ಸೇತುವೆಗಳ ಮೇಲೆ ಅಪಾಯ ಮಟ್ಟದಲ್ಲಿ ನೀರು ಹರಿಯುತ್ತಿದೆ. ಕಣಕುಂಬಿ ಅರಣ್ಯದಲ್ಲಿ ಒಂದೇ ದಿನ 27.1 ಸೆಂ.ಮೀ.ಗಳಷ್ಟು ಮಳೆ ಸುರಿದಿದೆ.