ಬೆಂಗಳೂರು [ಜೂ.21] : ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಬೇಕಾದ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ವಿತರಣಾ ವ್ಯವಸ್ಥೆಯಡಿ ಅಗತ್ಯ ಇರುವ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯ ಇದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಮುಕ್ತ ಮಾರುಕಟ್ಟೆಯಿಂದ ತೊಗರಿಬೇಳೆ ಖರೀದಿಸಲು ಇ-ಪ್ರೊಕ್ಯೂರ್‌ಪೋರ್ಟಲ್‌ ಮೂಲಕ ಇ-ಟೆಂಡರ್‌ಗೆ ಸರ್ಕಾರ ವ್ಯವಸ್ಥೆ ಮಾಡಿಕೊಂಡಿದೆ ಎಂದು ಹೇಳಿದರು.

ಇದೇ ವೇಳೆ ಅನ್ನಭಾಗ್ಯ ಯೋಜನೆಯಡಿ 3750 ಕೋಟಿ ರು. ಒದಗಿಸಲಾಗಿದೆ ಎಂದು ಜಮೀರ್‌ ಅಹಮದ್‌ ಖಾನ್‌ ಸಭೆಯ ಗಮನಕ್ಕೆ ತಂದರು. ಬಜೆಟ್‌ನಲ್ಲಿ ಘೋಷಿಸಿರುವಂತೆ ಇಲಾಖೆಯು ಕಾರ್ಯನಿರ್ವಹಿಸುತ್ತಿರುವ ಬಗ್ಗೆಯೂ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಆರ್ಥಿಕ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.