ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಇಂದು ಸಂಜೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಇನ್ನು ಅಟಲ್ ಅವರ ಅಂತ್ಯಕ್ರಿಯೆ ನಾಳೆ ಸಂಜೆ ದೆಹಲಿಯ ವಿಜಯ್ ಘಾಟ್‌ನ ‘ರಾಷ್ಟ್ರೀಯ ಸ್ಮೃತಿ ಸ್ಥಳ’ದಲ್ಲಿ ನೆರವೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. ನವದೆಹಲಿಯ ವಾಜಪೇಯಿ ನಿವಾಸಕ್ಕೆ ಕೆಲವೇ ಕ್ಷಣಗಳಲ್ಲಿ ಪ್ರಾರ್ಥೀವ ಶರೀರವನ್ನು ರವಾನಿಸಲಾಗುವುದು. ಅಲ್ಲಿಂದ ಬಿಜೆಪಿ ಕೇಂದ್ರ ಕಚೇರಿಗೆ ಕೊಂಡೊಯ್ಯಲಾಗುವುದು.

ನಾಳೆ ಮಧ್ಯಾಹ್ನದ ವರೆಗೆ ವಾಜಪೇಯಿ ಪ್ರಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.