ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಬವಣೆ ನೀಗಿಸುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳಿಂದ 500 ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ದಾವಣಗೆರೆ (ನ.09): ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಬವಣೆ ನೀಗಿಸುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳಿಂದ 500 ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಗರದ ಕಮ್ಮವಾರಿ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಲಾದ ರಾಜ್ಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟದ ಬೃಹತ್ ಸಮಾವೇಶ ಹಾಗೂ ಕನ್ನಡ ರಾಜ್ಯೋತ್ಸವದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರಸ್ತುತ 1 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಅದರೆ, ಈಗ ಸುಮಾರು 600 ರಿಂದ 700 ಮೆಗಾವ್ಯಾಟ್ ವಿದ್ಯುತ್ ಪೂರೈಕೆಯಾಗುತ್ತಿದೆ. ಇದರಿಂದ ವಿದ್ಯುತ್ ಸಮಸ್ಯೆ ತಲೆದೂರಿದೆ. ಆದ್ದರಿಂದ ಸಕ್ಕರೆ ಕಾರ್ಖಾನೆಗಳಲ್ಲಿ ೫೦೦ ಮೆಗಾವ್ಯಾಟ್ ವಿದ್ಯುತ್ ಖರೀದಿ ಮಾಡಿಕೊಂಡರೆ ವಿದ್ಯುತ್ ಕೊರತೆ ನೀಗಿಸಬಹುದಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಳಿ ಚರ್ಚಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆಯಲಾಗಿದೆ ಎಂದರು.

ಜಲ ವಿದ್ಯುತ್ ಶೇ. 40 ರಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಸದ್ಯ ಬರಗಾಲ ಛಾಯೆ ಆವರಿಸಿರುವುದರಿಂದ ನೀರಿನ ಕೊರತೆ ಉಂಟಾಗಿ, ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ. ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸಹಾಯಕ್ಕೆ ಸರ್ಕಾರ ನಿಂತಿದ್ದು, ವಿವಿಧ ಬೇಡಿಕೆ, ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಹಿಂದೆ ಎರಡು ಮೂರು ಸಾವಿರ ಇದ್ದಂತಹ ವೇತನವನ್ನು ಈಗ ರೂ.14 ಸಾವಿರ ವರೆಗೂ ಹೆಚ್ಚಿಸಲಾಗಿದೆ. ಇಲಾಖೆ ವ್ಯಾಪ್ತಿಯ ಬೋರ್ಡ್ ಮೀಟಿಂಗ್‌ನಲ್ಲಿಯೂ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸಮಸ್ಯೆಗಳನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು.

ವಿದ್ಯುತ್ ಇಲಾಖೆಯ ಲೈನ್‌ಮ್ಯಾನ್‌ಗಳು ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿದ್ದು, ಇವರ ಈ ಸೇವೆಗೆ ಪೂರಕವಾಗಿ ಬೇರೆ ಹೆಸರನ್ನು ನಾಮಕರಣ ಮಾಡಬೇಕೆಂಬ ಚಿಂತನೆ ಹೊಂದಿದ್ದು, ಈ ಬಗ್ಗೆ ನೀವು ಸಹ ಸಲಹೆ ನೀಡಬಹುದು ಎಂದರು.

ವಿಪ ಮಾಜಿ ಸದಸ್ಯ ಅಶ್ವತ್ ನಾರಾಯಣ ಮಾತನಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನಿಸುವ ಪ್ರಯತ್ನ ಮಾಡಿ ಎಂದು ಸಲಹೆ ನೀಡಿದರು.