ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಸತಿ ನಿಲಯಗಳು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 25 ಕೋಟಿ ರೂ. ವೆಚ್ಚದಲ್ಲಿ ಡೈನಿಂಗ್ ಟೇಬಲ್ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು (ಜು.26): ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಸತಿ ನಿಲಯಗಳು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 25 ಕೋಟಿ ರೂ. ವೆಚ್ಚದಲ್ಲಿ ಡೈನಿಂಗ್ ಟೇಬಲ್ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರಿಶಿಷ್ಟ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ 14.27 ಕೋಟಿ ರೂ. ವೆಚ್ಚದಲ್ಲಿ 7,712 ಡೈನಿಂಗ್ ಟೇಬಲ್ ಮತ್ತು ಮೊರಾರ್ಜಿ ವಸತಿ ಶಾಲೆಗಳಿಗೆ 11.61 ಕೋಟಿ ರೂ ವೆಚ್ಚದಲ್ಲಿ 6,300 ಡೈನಿಂಗ್ ಟೇಬಲ್‌ಗಳನ್ನು ಜಿಲ್ಲಾಮಟ್ಟದಲ್ಲೇ ಟೆಂಡರ್ ಕರೆದು ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸುಮಾರು 560 ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗಳಿಗೆ 78.65 ಕೋಟಿ ರೂ ವೆಚ್ಚದಲ್ಲಿ ಪೀಠೋಪಕರಣ ಖರೀದಿಸಲು ತೀರ್ಮಾನಿಸಲಾಗಿದೆ ಎಂದರು. ರಾಜ್ಯದ ವಸತಿ ರಹಿತ ಮೀನುಗಾರರಿಗೆ ಪ್ರಸಕ್ತ ಸಾಲಿನಲ್ಲಿ ಮತ್ಸಾಶ್ರಯ ಯೋಜನೆಯಡಿ ಮೂರು ಸಾವಿರ ಮನೆಗಳನ್ನು 40.16 ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನಿರ್ಮಿಸಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
