ಬೆಳಗಾವಿ :  ಕಳೆದ ವಿಧಾನಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಸಮರ ಸಾರಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಕಾರಣ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೆಚ್ಚೇನೂ ಹೇಳದೆ ಮಾತನ್ನು ಬೇರೆ ಕಡೆಗೆ ಹೊರಳಿಸಿದರು. ಇದೇ ವೇಳೆ ದೆಹಲಿಗೆ ಭೇಟಿ ನೀಡಿದಾಗ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು ನಿಜ. ಆದರೆ, ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಂಡು ಹೋಗುವುದು ಎರಡೂ ಪಕ್ಷಗಳಿಗೆ ಅನಿವಾರ್ಯವಾಗಿದೆ. ಈ ಸರ್ಕಾರ ಬೀಳುವುದಕ್ಕೆ ಎರಡೂ ಪಕ್ಷಗಳ ನಾಯಕರು ಬಿಡುವುದಿಲ್ಲ. ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ತನ್ನ ಐದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಆತ್ಮವಿಶ್ವಾಸದಿಂದ ಹೇಳಿದರು.

ವಿಟಿಯು ವೆಚ್ಚಕ್ಕೆ ಕಡಿವಾಣ :  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಂಸ್ಥಾಪನೆ ದಿನಾಚರಣೆಗೆ ದುಂದುವೆಚ್ಚ ಮಾಡುವುದು ಸರಿ ಇಲ್ಲ. ಈ ಕುರಿತು ಪರಿಶೀಲಿಸಿ, ಅನವಶ್ಯಕವಾಗಿ ದುಂದುವೆಚ್ಚ ಮಾಡುವುದಕ್ಕೆ ಕಡಿವಾಣ ಹಾಕುವಂತೆ ಸೂಚಿಸಲಾಗುವುದು ಎಂದು ಜಿ.ಟಿ.ದೇವೇಗೌಡ ತಿಳಿಸಿದರು.

ಬಜೆಟ್‌ ಅಧಿವೇಶನದ ನಂತರ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿ, ದುಂದುವೆಚ್ಚ ಮಾಡದಂತೆ ಸೂಚಿಸಲಾಗುವುದು. ಅಲ್ಲದೇ, ಬ್ರಿಟಿಷ್‌ ಸಂಸ್ಕೃತಿಗೆ ಅಂತ್ಯ ಹಾಡಲಾಗುವುದು. ವಿವಿಗಳನ್ನು ಎಲ್ಲರಿಗೂ ಮುಕ್ತಗೊಳಿಸಬೇಕಿದೆ ಎಂದರು.

ಬಜೆಟ್‌ ಮಂಡನೆ ಖಚಿತ:  ಸಿಎಂ ಕುಮಾರಸ್ವಾಮಿ ಬಜೆಟ್‌ ಮಂಡಿಸುತ್ತಾರೆ. ಅದರಲ್ಲಿ ಯಾವುದೇ ಅನುಮಾನವೇ ಇಲ್ಲ. ಬಜೆಟ್‌ ಮಂಡನೆ ಮತ್ತು ರೈತರ ಸಾಲ ಮನ್ನಾಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರ ನೀಡಿದ್ದಾರೆ. ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ, ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಸಮ್ಮಿಶ್ರ ಸರ್ಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಅಪಸ್ವರ ಕೇಳಿಬರುತ್ತಿದ್ದು, ಪಕ್ಷದ ವರಿಷ್ಠರು ಇದನ್ನು ಸರಿಪಡಿಸುತ್ತಾರೆ ಎಂದರು.