ಬೆಂಗಳೂರು[ಜು.07]: ರಾಜ್ಯದ ಮಲೆನಾಡು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಚುರುಕಾಗಿರುವ ಮುಂಗಾರು ಶುಕ್ರವಾರವೂ ಬಿರುಸಾಗಿಯೇ ಸುರಿದಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಈವರೆಗೂ ಬತ್ತಿದಂತಿದ್ದ ಜೀವನದಿಗಳಾದ ಕಾವೇರಿ, ತುಂಗಾ, ಶರಾವತಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

ಕೊಡಗಿನಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಅನೇಕ ಕಡೆ ಉತ್ತಮ ಮಳೆ ಸುರಿದಿದೆ. ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಇದೇ ರೀತಿ ನಿರಂತರ ಎರಡು ದಿನ ಮಳೆ ಸುರಿದಲ್ಲಿ ಭಾಗಮಂಡಲ ಮುಳುಗಡೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ತಾಲೂಕುಗಳಾದ ತೀರ್ಥಹಳ್ಳಿ, ಶೃಂಗೇರಿ, ಕೊಪ್ಪಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು ತುಂಗಾ ನದಿ ತುಂಬಿ ಹರಿಯಲಾರಂಭಿಸಿದೆ. ಶರಾವತಿ ನದಿಯಲ್ಲೂ ನೀರಿನ ಹರಿವು ಹೆಚ್ಚಿದೆ. ಆದರೆ ಯಾವ ನದಿಯಲ್ಲೂ ನೀರು ಅಪಾಯದ ಮಟ್ಟತಲುಪಿಲ್ಲ. ಲಿಂಗನಮಕ್ಕಿ ಜಲಾಶಯಕ್ಕೆ 23,191 ಕ್ಯುಸೆಕ್‌ ನೀರು, ತುಂಗಾ ನದಿಗೆ 16,239 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

ಕರಾವಳಿಯಲ್ಲಿ ರೆಡ್‌ ಅಲರ್ಟ್‌:

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತೀರದ ಎಲ್ಲ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಕೊಡಗು ಜಿಲ್ಲಾಡಳಿತಕ್ಕೆ ಈಗಾಗಲೇ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ತೀರದ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. 65 ಮಿ.ಮೀ ನಿಂದ 115 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳಪೆ ಕಾಮಗಾರಿ: ಅಬ್ಬಿಫಾಲ್ಸ್‌ಗೆ ತೆರಳುವ ರಸ್ತೆಯಲ್ಲೂ ಬಿರುಕು

ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆ ಕಾಟಕೇರಿ ಬಳಿ ಕುಸಿದಿರುವ ಬೆನ್ನಲ್ಲೇ ಇದೀಗ ಮಡಿಕೇರಿ ಹೊರ ಭಾಗದ ಸಂಪಿಗೆಕಟ್ಟೆಬಳಿ ಅಬ್ಬಿಫಾಲ್ಸ್‌ಗೆ ತೆರಳುವ ರಸ್ತೆ ಕೂಡ ಬಿರುಕು ಬಿಟ್ಟು ಆತಂಕ ಸೃಷ್ಟಿಸಿದೆ. ಕಳೆದ ವರ್ಷದ ಮಹಾಮಳೆಗೆ ಈ ರಸ್ತೆ ಸಂಪೂರ್ಣವಾಗಿ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ರಸ್ತೆಯನ್ನು ದುರಸ್ತಿ ಮಾಡಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಈ ಬಾರಿಯೂ ರಸ್ತೆ ಬಿರುಕುಬಿಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕುಸಿದ ಶಾಲೆ ಕಟ್ಟಡ

ಖಾನಾಪುರ: ಇತ್ತೀಚೆಗೆ ಸುರಿದ ಭಾರೀ ಮಳೆಗೆ ಶಿಥಿಲಗೊಂಡಿದ್ದ ಶಾಲಾ ಕಟ್ಟಡ ಕುಸಿದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ನಂದಗಡದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಬೆಳಗಿನ ಜಾವ ಕಟ್ಟಡ ಕುಸಿದಿದ್ದರಿಂದ ಭಾರೀ ಭಾರೀ ಅನಾಹುತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.