ಭಾರಿ ಮಳೆ-ಗಾಳಿ : ಕರಾವಳಿಯಲ್ಲಿ ಕಟ್ಟೆಚ್ಚರ
ಕಳೆದ ಕೆಲ ದಿನಗಳಿಂದ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ವೇಗವಾಗಿ ಗಾಳಿ ಬೀಸುತ್ತಿದ್ದು ಇದರಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು [ಜು.26]: ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. 3 ಮೀಟರಿಂದ 3.2 ಮೀಟರ್‌ವರೆಗೆ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.
ಇನ್ನುಳಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತಿಂಗಳಾಂತ್ಯದವರೆಗೆ ಭಾರೀ ಮಳೆ ಮುಂದುವರೆಯಲಿದೆ. ಸರಾಸರಿ 65 ಮಿ.ಮೀ ವರೆಗೆ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಕೆಲವು ದಿನಗಳಿಗೆ ಹೋಲಿಕೆ ಮಾಡಿದರೆ, ಕರಾವಳಿ ಭಾಗದಲ್ಲಿ ಗುರುವಾರ ಮಳೆ ಪ್ರಮಾಣ ತಗ್ಗಿತ್ತು. ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.