ರಾಜ್ಯದ ಕೊಡಗು ಜಿಲ್ಲೆಯಲ್ಲಿ ಹಾಗೂ ಕೇರಳದಲ್ಲಿ ಭಾರೀ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಇದೀಗ ಮತ್ತೆರಡು ರಾಜ್ಯಗಳಲ್ಲಿ ಭಾರೀ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. 

ಹೈದ್ರಾಬಾದ್ :  ಉತ್ತರ ತೆಲಂಗಾಣ, ಆಂಧ್ರದ ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಇಲ್ಲಿಯೂ ಕೂಡ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಇಲ್ಲಿನ ಅನೇಕ ಪ್ರದೇಶಗಳಲ್ಲಿ 100 ಮಿಲಿ ಮೀಟರ್ ಗೂ ಅಧಿಕ ಪ್ರಮಾಣದಲ್ಲಿ ಮಳೆ ಸುರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ದಕ್ಷಿಣ ವಲಯದಲ್ಲಿ ಮಾನ್ಸೂನ್ ಮಾರುತಗಳು ಅತ್ಯಂತ ಪ್ರಭಲವಾಗಿವೆ. ಬಂಗಾಳ ಕೊಲ್ಲಿಯಲ್ಲಿ ಪ್ರಭಲ ಮಾರುತಗಳು ಬೀಸುತ್ತಿದ್ದು ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಸೋಮವಾರ ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದಿದೆ. ವಿಶಾಖಪಟ್ಟಣಂ, ಗುಂಟೂರು, ರಾಯಲಸೀಮಾ, ಗೋದಾವರಿ, ಕೃಷ್ಣಾ, ವಿಜಿನಗರಂ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. 

ಈಗಾಗಲೇ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಬದುಕು ಅತಂತ್ರವಾಗಿದೆ. ದೇವರ ನಾಡು ಕೇರಳದಲ್ಲಿಯೂ ಕೂಡ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.