ಬೆಂಗಳೂರು :  ‘ವಾಯು’ ಚಂಡಮಾರುತದ ಅರ್ಭಟದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಎರಡು-ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದ ಲಕ್ಷ ದ್ವೀಪದ ಬಳಿ ಉಂಟಾಗಿದ್ದ ವಾಯುಭಾರ ಕುಸಿತ ಮಂಗಳವಾರ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಅದಕ್ಕೆ ‘ವಾಯು’ ಚಂಡಮಾರುತ ಎಂದು ಹೆಸರಿಡಲಾಗಿದೆ.

ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಡಲತೀರದಲ್ಲಿ 60 ರಿಂದ 70 ಕಿ.ಮೀ. ವೇಗದಲ್ಲಿ ಜೋರು ಗಾಳಿ ಬೀಸುತ್ತಿದೆ. ಕಡಲ ಅಲೆಗಳ ಅಬ್ಬರ ಒಂದೂವರೆ ಮೀಟರ್‌ನಿಂದ ಮೂರು ಮೀಟರ್‌ ಎತ್ತರದವರೆಗೆ ಹೆಚ್ಚಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಕೊಡಗು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಸಾಧಾರಣ ಮಳೆ:  ಚಂಡಮಾರುತ ಹಾಗೂ ವಾಯುಭಾರ ಕುಸಿತದಿಂದ ಮಂಗಳವಾರ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಇನ್ನು ಒಂದೆರಡು ದಿನ ಮಳೆ ಮುಂದುವರೆಯಲಿದೆ. ಉಳಿದಂತೆ ಒಳನಾಡು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿ ಜೋರು ಗಾಳಿ ಬೀಸಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ಮುಂಗಾರು ಪ್ರವೇಶವಿಲ್ಲ:  ಭಾರತೀಯ ಹವಾಮಾನ ಇಲಾಖೆ ಮುಂಗಾರು ಪ್ರವೇಶದ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಬುಧವಾರ ಮುಂಗಾರು ಪ್ರವೇಶದ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.