ಬೆಂಗಳೂರು [ಸೆ.04]:  ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌-409 (ನಂಬಿಕೆ ದ್ರೋಹ) ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ವರ್ಷ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಆರು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.

ವಿಶೇಷ ನ್ಯಾಯಾಲಯದ ಆದೇಶ ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಕ್ರಿಮಿನಲ್‌ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಮಂಗಳವಾರ ಈ ಮಧ್ಯಂತರ ಆದೇಶ ಮಾಡಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇದೇ ವೇಳೆ, ಐಪಿಸಿ ಸೆಕ್ಷನ್‌-409 ಆರೋಪ ಸೇರಿ ಮೂಲ ಪ್ರಕರಣದ ವಿಚಾರಣೆ ಮುಂದುವರಿಸುವಂತೆ ವಿಶೇಷ ನ್ಯಾಯಾಲಯಕ್ಕೆ ನ್ಯಾಯಪೀಠ ನಿರ್ದೇಶಿಸಿತು. ಜತೆಗೆ, ಅರ್ಜಿ ಸಂಬಂಧ ಪ್ರತಿವಾದಿಯಾಗಿರುವ ಗಾಲಿ ಜನಾರ್ದನ ರೆಡ್ಡಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.