ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾರ ನೇತೃತ್ವದಲ್ಲಿ ಹೋಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು (ಏ.18): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾರ ನೇತೃತ್ವದಲ್ಲಿ ಹೋಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದೆ ಎಂದು ಹೇಳಿರುವ ಮಧ್ಯೆಯೇ ವಿಕಾಸ ಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್ ಈ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.

ಮುಂಬರುವ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದು ಸದ್ಯ ನಮ್ಮ ಮುಂದಿರುವ ಗುರಿಯಾಗಿದೆ. ನಮ್ಮ ಪಕ್ಷದ ನಾಯಕರು ಯಾವತ್ತೂ ಅಧಿಕಾರದ ಹಿಂದೆ ಬೀಳುವುದಿಲ್ಲ. ಹೈಕಮಾಂಡ್ ವಹಿಸುವ ಕೆಲಸವನ್ನು ಮಾಡುತ್ತೇವೆ. ನಮ್ಮ ಮುಂದಿರುವ ಗುರಿ ಈಡೇರಿಸಲು ಎಲ್ಲ ನಾಯಕರು ಒಂದಾಗಿ ಕೆಲಸ ಮಾಡುತ್ತೇವೆ ಎಂದು ಸಮಜಾಯಿಷಿ ನೀಡಿದರು.

ಜೆಡಿಎಸ್ ಪಕ್ಷದ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಯಾವುದೇ ಚಿಂತನೆ ಇಲ್ಲ. ಈ ಬಗೆಗೆ ಹೈಕಮಾಂಡ್ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಸ್ಪಷ್ಪಡಿಸಿದ ಡಾ.ಪರಮೇಶ್ವರ್, ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ. ಈ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆ ಬಗೆಗೂ ಚರ್ಚೆ ನಡೆದಿಲ್ಲ ಎಂದು ಹೇಳಿದರು.