ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಚೀನಾಗೆ ಭಾರತದ ಎದಿರೇಟು!
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಚೀನಾ| ಯಥಾಸ್ಥಿತಿ ಬದಲಾಯಿಸುವ ಏಕಪಕ್ಷೀಯ ನಿರ್ಧಾರ ಸರಿಯಲ್ಲ ಎಂದ ಚೀನಾ| ಕಣಿವೆಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿದ್ದಕ್ಕೆ ಚೀನಾ ಪರೋಕ್ಷ ಆಕ್ಷೇಪ| ಚೀನಾದ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭಾರತ| ನಮ್ಮ ಸಾರ್ವಭೌಮತ್ವ ಮತ್ತು ಪ್ರಾಂತೀಯ ಆಂತರಿಕತೆಯನ್ನು ಗೌರವಿಸಬೇಕೆಂದ ಭಾರತ| ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಿಪಿಇಸಿ ಯೋಜನೆಗೆ ಭಾರತದ ಆಕ್ಷೇಪ|
ವಿಶ್ವಸಂಸ್ಥೆ(ಸೆ.28): ವಿಶ್ವಸಂಸ್ಥೆ ಸಾಮಾನ್ಯ ಸಭೆಯ ತನ್ನ ಭಾಷಣದಲ್ಲಿ ಚೀನಾ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ವಿಷಯ ಪ್ರಸ್ತಾಪಿಸಿದ್ದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕಪಡಿಸಿದೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ವಿಷಯ ಪ್ರಸ್ತಾಪಿಸಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ವಿಶ್ವಸಂಸ್ಥೆಯ ಹಕ್ಕುಪತ್ರ, ಭದ್ರತಾ ಮಂಡಳಿ ನಿರ್ಣಯಗಳು ಹಾಗೂ ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಕಾಶ್ಮೀರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಬೇಕು ಎಂದು ವಾಂಣಗ್ ಯಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಕಾಶ್ಮೀರದ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಕ್ರಮ ಅನಗತ್ಯ ಎಂದು ಹೇಳುವ ಮೂಲಕ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ಕ್ರಮವನ್ನು ಚೀನಾ ಪರೋಕ್ಷವಾಗಿ ಟೀಕಿಸಿದೆ.
ಚೀನಾದ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತ, ಜಮ್ಮು ಮತ್ತು ಕಾಶ್ಮೀರದ ವಿದ್ಯಮಾನಗಳು ಭಾರತದ ಆಂತರಿಕ ವಿಷಯವಾಗಿದ್ದು, ಇದರಲ್ಲಿ ಚೀನಾ ಮೂಗು ತೂರಿಸುವುದು ಸರಿಯಲ್ಲ ಎಂದು ಹರಿಹಾಯ್ದಿದೆ.
ಭಾರತದ ಸಾರ್ವಭೌಮತ್ವ ಮತ್ತು ಪ್ರಾಂತೀಯ ಆಂತರಿಕತೆಯನ್ನು ಬೇರೆ ದೇಶಗಳು ಗೌರವಿಸುತ್ತವೆ ಎಂದು ನಾವು ಭಾವಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಚೀನಾಗೆ ಎದಿರೇಟು ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ ಯಥಾಸ್ಥಿತಿ ಬಯಸುವುದಾದರೆ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್(ಸಿಪಿಇಸಿ) ಯೋಜನೆಯನನೂ ಕೂಡ ನಿಲ್ಲಿಸಿ ಯಥಾಸ್ಥಿತಿ ಕಾಪಾಡಬೇಕು ಎಂದು ಚೀನಾಗೆ ಭಾರತ ಎದಿರೇಟು ನೀಡಿದೆ.