ಇದು ಕಾಂಗ್ರೆಸ್‌ ನಿರ್ನಾಮದ ಸಂಕೇತ

Jagadish Shetter Slams Congress Leaders
Highlights

ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಜೆಡಿಎಸ್‌ ಮುಂದೆ ಮಂಡಿಯೂರಿ ಕುಳಿತಿದೆ. ಇದು ಕಾಂಗ್ರೆಸ್‌ ನಿರ್ನಾಮವಾಗುತ್ತಿರುವುದರ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಟೀಕಿಸಿದ್ದಾರೆ.

ಹಾವೇರಿ :  ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಜೆಡಿಎಸ್‌ ಮುಂದೆ ಮಂಡಿಯೂರಿ ಕುಳಿತಿದೆ. ಇದು ಕಾಂಗ್ರೆಸ್‌ ನಿರ್ನಾಮವಾಗುತ್ತಿರುವುದರ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಟೀಕಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ 4 ವರ್ಷಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ, ಬಡವರಿಗೆ ಸೌಲಭ್ಯ ಕಲ್ಪಿಸಿ ಅನೇಕ ಯೋಜನೆ ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್‌ ಸಣ್ಣಪುಟ್ಟಪಕ್ಷಗಳೊಂದಿಗೆ ಸೇರಿ ಕುತಂತ್ರ ನಡೆಸಿದೆ. ಆದರೆ, ಮೋದಿ ಅವರ ಶಕ್ತಿ ಮುಂದೆ ಯಾರ ಆಟವೂ ನಡೆಯುವುದಿಲ್ಲ. ರಾಜ್ಯದಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನ ಪಡೆದಿರುವ ಕಾಂಗ್ರೆಸ್‌ ಜನಾದೇಶಕ್ಕೆ ವಿರುದ್ಧವಾಗಿ ಜೆಡಿಎಸ್‌ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತವರು ಕ್ಷೇತ್ರದಲ್ಲೇ ಸೋಲಿಸುವ ಮೂಲಕ ಅವರ ಆಡಳಿತ ಸಾಕು ಎಂದು ಜನ ತೀರ್ಮಾನಿಸಿದ್ದಾರೆ. ಆದರೂ, ಜನಾದೇಶಕ್ಕೆ ವಿರುದ್ಧವಾಗಿ ಸರ್ಕಾರ ರಚಿಸಿರುವುದು ಪ್ರಜಾತಂತ್ರ ವ್ಯವಸ್ಥೆಯ ವ್ಯಂಗ್ಯವಾಗಿದೆ ಎಂದರು.

ದೇಶದಲ್ಲಿ ಕಾಂಗ್ರೆಸ್‌ ಹೀನಾಯ ಸ್ಥಿತಿಗೆ ತಲುಪಿದೆ. ಪ್ರಾದೇಶಿಕ ಪಕ್ಷಗಳೊಂದಿಗೆ ಎಲ್ಲೆಲ್ಲಿ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದೆಯೋ ಅಲ್ಲೆಲ್ಲ ಕಾಂಗ್ರೆಸ್‌ಗೆ ವಿಳಾಸ ಇಲ್ಲದಂತಾಗಿದೆ. ರಾಜ್ಯದಲ್ಲೂ ಇದೇ ಗತಿ ಬರಲಿದೆ. ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರೇ 5 ವರ್ಷ ಸಿಎಂ ಎಂದು ಹೇಳುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಸಿಎಂ ಎಂಬುದು ಸಾಬೀತಾಗಿದೆ. ಹೀಗಾಗಿ, ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನಲ್ಲಿ ವಿಲೀನವಾಗುವುದೇ ಒಳ್ಳೆಯದು ಎಂದರು.

ಮತ್ತೊಮ್ಮೆ ಮೋದಿ:  ವಿರೋಧ ಪಕ್ಷಗಳು ಏನೇ ಕುತಂತ್ರ ಮಾಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಪ್ಪು ಹಣ ತರಲು ಮೋದಿ ಅವರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ, ತೆರಿಗೆ ವ್ಯವಸ್ಥೆಯಲ್ಲಿ ತಂದ ಸುಧಾರಣಾ ಕ್ರಮದಿಂದ ದೇಶದ ಆರ್ಥಿಕ ಸ್ಥಿತಿ ಸುಧಾರಿಸಿದೆ. ಉಪಚುನಾವಣೆಯ ಫಲಿತಾಂಶವು ಮುಂದಿನ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿಯಲ್ಲ. ರಾಜ್ಯದ ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿತ್ತು. ಈಗ ಅಲ್ಲಿ ಬಿಜೆಪಿ ಗೆದ್ದಿದೆ ಎಂದರು.

loader