ಬೆಂಗಳೂರು :  ಮುಂದಿನ ಎರಡು ಮೂರು ದಿನಗಳಲ್ಲಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಚುನಾವಣೆ ದಿನಾಂಕ ಘೋಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಜೊತೆ ಒಗ್ಗೂಡಿಕೊಂಡಿದ್ದೇವೆ. ಅಲ್ಲದೆ, ರಾಜ್ಯದಲ್ಲಿ ಮೈತ್ರಿ ಸರ್ಕಾರದಲ್ಲಿ ಚುನಾವಣೆ ಎದುರಿಸುತ್ತಿದ್ದು, ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಜೆಡಿಎಸ್‌ ಪಕ್ಷಕ್ಕೆ ಎಷ್ಟುಸ್ಥಾನ ನೀಡಬೇಕು ಎಂಬ ವಿಚಾರವನ್ನು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಈಗಾಗಲೇ ಸುದೀರ್ಘ ಚರ್ಚೆ ನಡೆಸಿದ್ದೇವೆ. ಸ್ಕ್ರೀನಿಂಗ್‌ ಸಮಿತಿ ಸಭೆಯ ಬಳಿಕ ಮುಂದಿನ ತೀರ್ಮಾನ ತಿಳಿಸುವುದಾಗಿ ಅವರು ಹೇಳಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹತ್ತು, ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಅಂಶವನ್ನು ಆಧಾರವನ್ನಾಗಿಟ್ಟುಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.

ಪ್ರಸಕ್ತ ಅವಧಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕುರಿತು ಶೀಘ್ರ ಪ್ರಕಟಿಸುವುದಾಗಿ ತಿಳಿಸಿದ ದೇವೇಗೌಡರು, ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಸ್ಪರ್ಧೆ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು.