ಬೆಂಗಳೂರು[ಜು.22]: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಜೆಡಿಎಸ್‌ ಈಗ ಅಂತಿಮವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲು ಮುಂದೆ ಬಂದಿದೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ, ಡಾ.ಜಿ. ಪರಮೇಶ್ವರ್‌ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಪೈಕಿ ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಜೆಡಿಎಸ್‌ ವರಿಷ್ಠರು ಕಾಂಗ್ರೆಸ್‌ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವ ಡಿ.ಕೆ. ಶಿವಕುಮಾರ್‌, ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವುದಾಗಿ ಆಫರ್‌ ಕೊಟ್ಟಿರುವುದು ಸತ್ಯ. ಈ ಬಗ್ಗೆ ಎಲ್ಲ ರೀತಿಯ ಚರ್ಚೆ ನಡೆದಿದ್ದು, ಜೆಡಿಎಸ್‌ ವರಿಷ್ಠರು ಕಾಂಗ್ರೆಸ್‌ ಹೈಕಮಾಂಡ್‌ ಜತೆಗೂ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರ ಉಳಿಸಿಕೊಳ್ಳಲು ನಾವು ಯಾವ ರೀತಿಯ ತ್ಯಾಗಕ್ಕೂ ಸಿದ್ಧವಾಗಿದ್ದೇವೆ ಎಂದು ಜೆಡಿಎಸ್‌ ವರಿಷ್ಠರು ಮತ್ತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ ನಾಯಕರಿಗೆ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುತ್ತೇವೆ ಎಂದು ಮುಕ್ತ ಕಂಠದಿಂದ ಹೇಳಿದ್ದಾರೆ. ಸಿದ್ದರಾಮಯ್ಯ, ಡಾ.ಜಿ. ಪರಮೇಶ್ವರ್‌ ಅಥವಾ ಡಿ.ಕೆ. ಶಿವಕುಮಾರ್‌ ಅವರ ಪೈಕಿ ಯಾರೇ ಮುಖ್ಯಮಂತ್ರಿಯಾಗಬಹುದು. ಇದಕ್ಕೆ ನಾವು ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿರುವುದಾಗಿ ಹೇಳಿದರು.