Asianet Suvarna News Asianet Suvarna News

ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ| ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ| ಮಹಾರಾಷ್ಟ್ರದಲ್ಲಿ ಹುಟ್ಟಿ ಬೆಳೆದು, ಕನ್ನಡ ಸಾಹಿತ್ಯದ ಕಂಪು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದ್ದ ಸಾಹಿತಿ

Jnanpith Awardee Girish Karnad Passes Away
Author
Bangalore, First Published Jun 10, 2019, 9:17 AM IST

ಬೆಂಗಳೂರು[ಜೂ.10]: ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಹಾಗೂ ಸಾಹಿತಿ ಗಿರೀಶ್ ಕಾರ್ನಾಡ್ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 3 ರಿಂದ 4:30 ರ ವೇಳೆಗೆ ಬೈಯಪ್ಪನಹಳ್ಳಿಯ ಕಲ್ಲಪ್ಪನಹಳ್ಳಿಯಲ್ಲಿ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಕಾರ್ನಾಡ್ ಅಂತ್ಯಕ್ರಿಯೆ ನಡೆಯಲಿದೆ. 

"

1938 ಮೇ 19ರಂದು ಗಿರೀಶ್ ಕಾರ್ನಾಡ್ ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಗಿರೀಶ್ ಕಾರ್ನಾಡ್, ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದ್ದರು. ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿರುವ ಕಾರ್ನಾಡ್, ಆಕ್ಸ್ಫರ್ಡ್ ಡಿಬೇಟ್ ಕ್ಲಬ್ ಅಧ್ಯಕ್ಷರಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 
ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದ ಕಾರ್ನಾಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯ ಪಸರಿಸಿದ್ದರು. 

ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ' ಯಯಾತಿ' ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು.

ಮನೆಗೆ ಬರಬೇಡಿ: ಗಿರೀಶ್ ಕಾರ್ನಾಡ್ ಕುಟುಂಬಸ್ಥರ ಮನವಿ

ಮದ್ರಾಸಿನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.  ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕೂಡಾ ಅವರು ಕಾರ್ಯನಿರ್ವಹಿಸಿರುವರು.

ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಮುಂತಾದವು ಕಾರ್ನಾಡರ ಪ್ರಮುಖ ನಾಟಕ ಕೃತಿಗಳು.  ಅಲ್ಲದೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಕಾರ್ನಾಡ್ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರೂ ಹೌದು.  ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮುಂತಾದ  ಸಿನಿಮಾಗಳು; ಸೂಫಿ ಪಂಥ,  ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶಿಸಿದ್ದಾರೆ.  ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಕಾರ್ನಾಡರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

Follow Us:
Download App:
  • android
  • ios