ಬೆಂಗಳೂರು: ಜ.11, 12 ರಂದು ನಡೆಯುವ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಭಾಗ ವಹಿಸಲು ರಾಜ್ಯದ ಎಲ್ಲಾ 104 ಬಿಜೆಪಿ ಶಾಸ ಕರು, ಸಂಸದರು ದೆಹಲಿಗೆ ತೆರಳುತ್ತಿದ್ದಾರೆ. ಈ ಸಭೆಯ ನಂತರ 13 ಅಥವಾ 14 ರಂದು ಶಾಸಕರು, ಸಂಸದರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಮಾತನಾಡಲಿದ್ದಾರೆ.

ಶುಕ್ರವಾರ ಮತ್ತು ಶನಿವಾರ ಎರಡು ದಿನ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆ ಯಲ್ಲಿ ರಾಜ್ಯ ಬಿಜೆಪಿಯ ಎಲ್ಲ ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಇತರೆ ರಾಜ್ಯಗಳ ಬಿಜೆಪಿ ಶಾಸಕರು, ಸಂಸದರು ಹಾಗೂ ರಾಜ್ಯ ಪದಾಧಿಕಾರಿಗಳ ರೀತಿಯಲ್ಲಿ ಕರ್ನಾಟಕದಿಂದಲೂ ಬಿಜೆಪಿ ಮುಖಂಡರು ರಾಷ್ಟ್ರೀಯ ಪರಿಷತ್ತಿನ ಸಭೆಯಲ್ಲಿ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ಈ ಬಾರಿಯ ರಾಷ್ಟ್ರೀಯ ಪರಿಷತ್ ಸಭೆ ಮಹತ್ವ ಪಡೆದುಕೊಂಡಿದೆ.

ಈ ಎರಡು ದಿನಗಳ ಸಭೆಯ ನಂತರ 13 ಅಥವಾ 14ರಂದು ಕರ್ನಾಟಕದ ಪಕ್ಷದ ಎಲ್ಲ ಸಂಸದರು, ಶಾಸಕರನ್ನು ಉದ್ದೇಶಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಪಕ್ಷದ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಭಾಗವಹಿಸುವ ಸಂಬಂಧ ಪಕ್ಷದ ಎಲ್ಲ ಶಾಸಕರೂ ದೆಹಲಿಗೆ ತೆರಳಲಿದ್ದಾರೆ. ಈ ಬಗ್ಗೆ ಈಗಾಗಲೇ ಎಲ್ಲರಿಗೂ ಸೂಚನೆ ಕಳುಹಿಸಲಾಗಿದೆ. ಅದಾದ ನಂತರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷರು, ಪ್ರಧಾನಿಗಳು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‌ನ ಯಾರೊಬ್ಬ ನಾಯಕರೂ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ. ಶಾ ಕೂಡ ಯಾರನ್ನೂ ಭೇಟಿ ಮಾಡಿಲ್ಲ. ಆ ರೀತಿಯ ಸಂದರ್ಭ ಇದೆ ಎಂದು ನನಗನಿಸುತ್ತಿಲ್ಲ ಎಂದು ಇದೇ ವೇಳೆ ಯಡಿಯೂರಪ್ಪ ಸ್ಪಷ್ಟಪಡಿಸಿದರು.