ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಿಂದ ಆರಂಭಗೊಂಡು ಚುನಾವಣಾ ತಂತ್ರಗಾರಿಕೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರ ಸಭೆ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆಯಲಿದೆ.

ಬೆಂಗಳೂರು : ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಿಂದ ಆರಂಭಗೊಂಡು ಚುನಾವಣಾ ತಂತ್ರಗಾರಿಕೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರ ಸಭೆ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆಯಲಿದೆ.

ಮಂಗಳವಾರ ಬೆಳಗ್ಗೆ 12 ಗಂಟೆಗೆ ರಾಮನಗರ ವಿಧಾನಸಭಾ ಕ್ಷೇತ್ರದ ಬಗ್ಗೆ ಮೊದಲ ಸಭೆ ನಡೆಯಲಿದ್ದು, ಅನಂತರ ಸರಣಿಯಾಗಿ ಜಮಖಂಡಿ ವಿಧಾನಸಭಾ ಕ್ಷೇತ್ರ, ಲೋಕಸಭಾ ಕ್ಷೇತ್ರಗಳಾದ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಕ್ಷೇತ್ರಗಳ ಬಗ್ಗೆ ಸಭೆ ನಡೆಯಲಿದೆ. ಈ ಸಭೆಗೆ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ಕಳೆದ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳು, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿಗಳು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಬಂಧಪಟ್ಟಪ್ರತಿಯೊಬ್ಬರನ್ನು ಆಹ್ವಾನಿಸಲಾಗಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಜೆಡಿಎಸ್‌ ಜತೆಗಿನ ಮೈತ್ರಿ ಉಪ ಚುನಾವಣೆಯಲ್ಲಿ ಮುಂದುವರೆಯಬೇಕೇ ಎಂಬ ಬಗ್ಗೆ ಅಧಿಕೃತ ನಿರ್ಧಾರ ಕೈಗೊಳ್ಳಲಾಗುವುದು. ವಾಸ್ತವವಾಗಿ ಮೈತ್ರಿ ಮುಂದುವರೆಸಲು ಉಭಯ ಪಕ್ಷಗಳ ನಾಯಕರು ಈಗಾಗಲೇ ನಿರ್ಧರಿಸಿದ್ದಾರೆ. ಅದು ಸಭೆಯಲ್ಲಿ ಅಧಿಕೃತಗೊಳ್ಳಲಿದೆ.

ಅದೇ ರೀತಿ ಜೆಡಿಎಸ್‌ಗೆ ಯಾವ ಕ್ಷೇತ್ರ ಬಿಟ್ಟುಕೊಡಬೇಕು. ಬಿಟ್ಟುಕೊಡುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಕಾಂಗ್ರೆಸ್‌ ಯಾವ್ಯಾವ ರೀತಿ ಸಹಕಾರ ನೀಡಬೇಕು. ಕಾಂಗ್ರೆಸ್‌ ಪಾಲಿಗೆ ಬರುವ ಕ್ಷೇತ್ರಗಳಲ್ಲಿ ಯಾರು ಅಭ್ಯರ್ಥಿಯಾಗಬೇಕು. ಜೆಡಿಎಸ್‌ನಿಂದ ಯಾವ ರೀತಿ ನೆರವು ಪಡೆಯಬೇಕು. ಚುನಾವಣಾ ಪ್ರಚಾರ ತಂತ್ರಗಾರಿಕೆ ಏನಾಗಬೇಕು. ಆಯಾ ಕ್ಷೇತ್ರಗಳಿಗೆ ಯಾರನ್ನು ಉಸ್ತುವಾರಿ ಮಾಡಬೇಕು ಎಂಬುದು ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.