ಬೆಂಗಳೂರು [ಜು.26] :  ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ನಾಲ್ವರು ಶಾಸಕರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಗಿಂತ ಮೊದಲೇ ಜೆಡಿಎಸ್‌ ತಾಲೀಮು ನಡೆಸಲು ಮುಂದಾಗಿದೆ.

ನಗರದ ರಾಜರಾಜೇಶ್ವರಿನಗರ, ಕೆ.ಆರ್‌.ಪುರ, ಮಹಾಲಕ್ಷ್ಮೀ ಲೇಔಟ್‌ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯೊಂದಿಗೆ ಕೈ ಜೋಡಿಸಿ ಸಮ್ಮಿಶ್ರ ಸರ್ಕಾರ ಕೆಡವಲು ಸಹಕರಿಸಿದ್ದಾರೆ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದು ಖಚಿತ. ಸರ್ಕಾರ ಪತನಕ್ಕೆ ಕಾರಣವಾಗಿರುವ ಈ ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಅತೃಪ್ತರ ವಿರುದ್ಧ ಸೇಡು ತೀರಿಸಲು ಜೆಡಿಎಸ್‌ ವರಿಷ್ಠರು ತೀರ್ಮಾನಿಸಿದಂತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳ ಸಭೆಯನ್ನು ಕರೆಯಲಾಗಿದೆ.

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ವರಿಷ್ಠರು ಪಕ್ಷವನ್ನು ಮತ್ತಷ್ಟುಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಬೆಂಗಳೂರು ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮುಖಂಡರ ಮತ್ತು ಪದಾಧಿಕಾರಿಗಳ ಸಭೆಯನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕರೆದಿದ್ದಾರೆ. ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಶನಿವಾರ ಮತ್ತು ಭಾನುವಾರ ಸಭೆಯನ್ನು ನಿಗದಿಗೊಳಿಸಲಾಗಿದೆ. ಶನಿವಾರ ಬೆಳಗ್ಗೆ 11ಕ್ಕೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಮತ್ತು ಮಧ್ಯಾಹ್ನ 12ಕ್ಕೆ ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ಮುಖಂಡರು, ಪದಾಧಿಕಾರಿಗಳ ಸಭೆ ನಡೆಯಲಿದೆ. ಭಾನುವಾರ ಬೆಳಗ್ಗೆ 11ಕ್ಕೆ ಮಹಾಲಕ್ಷ್ಮೇ ಲೇಔಟ್‌ ವಿಧಾನಸಭಾ ಕ್ಷೇತ್ರ ಹಾಗೂ ಮಧ್ಯಾಹ್ನ 12ಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಮುಖಂಡರು, ಪದಾಧಿಕಾರಿಗಳ ಸಭೆ ಜರುಗಲಿದೆ.