ಬೆಂಗಳೂರು, [ಸೆ.19]: ಪ್ರತಿಪಕ್ಷದ ನಾಯಕರ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ನಡೆದಿದೆ. ಇದಕ್ಕೆ ಹೈಕಮಾಂಡ್ ಬಳಿ ಭರ್ಜರಿ ಲಾಬಿ ಶುರುವಾಗಿದೆ.

ಇದರ ಮಧ್ಯೆ ಸಿಎಂ ಅವರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾ ಗೂ ದಲಿತ ಉದ್ದಿಮೆದಾರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸವಲತ್ತುಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ  ಉದ್ಘಾಟಿಸಿದರು. ಸಚಿವರಾದ ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು ಎಂದು CM Of Karnataka ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಬಳಿಕ ಆ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಎಚ್.ಕೆ.ಪಾಟೀಲ್, ಡಾ.ಜಿ. ಪರಮೇಶ್ವರ, ಸಿದ್ದರಾಮಯ್ಯ ಸೇರಿದಂತೆ ಕೆಲ ಹಿರಿಯ ಶಾಸಕರು ವಿಪಕ್ಷ ಸ್ಥಾನದ ರೇಸ್ ನಲ್ಲಿದ್ದು, ಯಾರನ್ನು ನೇಮಿಸಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಇದರ ನಡುವೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎನ್ನುವ ಟ್ವೀಟ್ ಕೆಲ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದಂತೂ ಸತ್ಯ.

ಇಂದು [ಗುರುವಾರ] ಬೆಂಗಳೂರಿನ ಅಂಬೇಡ್ಕರ್​  ಭವನದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯಗಳ ಆರ್ಥಿಕ ಅಭಿವೃದ್ಧಿ ಅರಿವು ಕುರಿತ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮುಖಾಮುಖಿಗೆ ಸಾಕ್ಷಿಯಾಗಿತ್ತು.