ಬೆಂಗಳೂರು [ಆ.08]:  ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಟೈಂಪಾಸ್‌ಗಾಗಿ ಹೋಗಿರಲಿಲ್ಲ. ರಾಜ್ಯದ ಅಭಿವೃದ್ಧಿ ಯೋಜನೆಗಳ ಸಂಬಂಧ ಚರ್ಚಿಸಲು ತೆರಳಿದ್ದರು ಎಂದು ಬಿಜೆಪಿ ನಾಯಕ ಹಾಗೂ ಹಿರಿಯ ಶಾಸಕ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಕೇಂದ್ರದ ಸಚಿವರಾದ ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಪ್ರವಾಹ ಹೆಚ್ಚುತ್ತಿರುವುದರಿಂದ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ಹೆಚ್ಚಿನ ಅನುದಾನ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಅಗತ್ಯವಾದ ಸಿಬ್ಬಂದಿ ಮತ್ತು ದೋಣಿಗಳನ್ನು ನೀಡಬೇಕು ಎಂಬ ಕೋರಿಕೆಯನ್ನೂ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಕೃಷ್ಣಾ ಮತ್ತು ಮಹಾದಾಯಿ ನದಿ ನೀರಿನ ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸಬೇಕು ಎಂಬ ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ಹಲವಾರು ರೈಲ್ವೆ ಮತ್ತು ರಸ್ತೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ದೆಹಲಿಗೆ ತೆರಳುವ ಮೊದಲು ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿದ್ದರು. ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲನೆಯನ್ನೂ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದರು. ಅವರು ಸುಮ್ಮನೆ ಟೈಂಪಾಸ್‌ಗಾಗಿ ದೆಹಲಿಗೆ ಹೋಗಿರಲಿಲ್ಲ. ಹೀಗಾಗಿ, ಜೆಡಿಎಸ್‌ನಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.