ಬೆಂಗಳೂರು, (ಸೆ.15): ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರು ಶನಿವಾರ ಸಂಜೆ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಸೂಚನೆ ಮೇರೆಗೆ ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಗೊಳಿಸುವ ಕುರಿತು ಮತ್ತು ಸಂಪುಟ ವಿಸ್ತರಣೆ ಬಗ್ಗೆ ರಾಜ್ಯ ಕೈ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಮೊದಲಿಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರೊಂದಿಗೆ ಚರ್ಚೆ ನಡೆಸಲಿದ್ದು, ಬಳಿಕ ಇಂದು ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 

ನಂತರ ಯೂರೋಪ್​ ಪ್ರವಾಸ ಮುಗಿಸಿ ಭಾನುವಾರ ವಾಪಸಾಗಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ವೇಣುಗೋಪಾಲ್​ ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. 

ಜಾರಕಿಹೊಳಿ ಬ್ರದರ್ಸ್ ಹಾಗೂ ಸಚಿವ ಆಕಾಂಕ್ಷಿಗಳು  ಸಿದ್ದು ಬರುವಿಕೆಗಾಗಿ ಬಕ ಪಕ್ಷಿಗಳಂತೆ ಕಾದು ಕುಳಿತ್ತಿದ್ದು, ಭಾನುವಾರ ಬೆಳಗ್ಗೆ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದ್ರಿಂದ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯಲಿವೆ.