ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ, ಆದರೆ ಅನರ್ಹರನ್ನು ಗುರುತಿಸಿ ಅವರ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಯಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಈ ಪ್ರಕ್ರಿಯೆಯು ನಿಜವಾದ ಬಡವರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವುದಾಗಿದೆ.

ಬೆಂಗಳೂರು (ಸೆ.17): ರಾಜ್ಯದಲ್ಲಿರುವ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಯಾರು ಬಡತನ ರೇಖೆಗಿಂದ ಮೇಲಿದ್ದಾರೋ ಅವರನ್ನು ಗುರುತಿಸಿ (ಅನರ್ಹ ಬಿಪಿಎಲ್ ಕಾರ್ಡ್‌ದಾರರನ್ನು ಅವರನ್ನು ಎಪಿಎಲ್ ಕಾರ್ಡ್‌ಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿರುವ ಯಾವುದೇ ರೇಷನ್ ಕಾರ್ಡ್‌ಗಳನ್ನು ಸರ್ಕಾರದಿಂದ ರದ್ದು ಮಾಡುವುದಿಲ್ಲ, ಬದಲಾಗಿ ಅರ್ಹರಿಗೆ ಮಾತ್ರ ಬಡತನ ರೇಖೆಗಿಂತ ಕೆಳಗಿರುವವರಿಗೆ (ಬಿಲೋ ಪಾವರ್ಟಿ ಲೈನ್ - ಬಿಪಿಎಲ್) ಸೌಲಭ್ಯ ಸಿಗುವಂತೆ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯಾಕೆ ಈ ನಿರ್ಧಾರ?

ಸರ್ಕಾರದ ಮಾಹಿತಿಯ ಪ್ರಕಾರ, ಅನೇಕ ಅನರ್ಹ ವ್ಯಕ್ತಿಗಳು ಬಿಪಿಎಲ್ ಕಾರ್ಡ್ ಪಡೆದುಕೊಂಡು ಸರ್ಕಾರದ ಸಬ್ಸಿಡಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ತೆರಿಗೆ ಪಾವತಿಸುವವರು, 25 ಲಕ್ಷ ರೂಪಾಯಿಗಿಂತ ಅಧಿಕ ವಾರ್ಷಿಕ ವಹಿವಾಟು ನಡೆಸುವವರು ಮತ್ತು 7.5 ಎಕರೆಗಿಂತ ಹೆಚ್ಚು ಆಸ್ತಿ ಹೊಂದಿರುವವರೂ ಈ ಪಟ್ಟಿಯಲ್ಲಿದ್ದಾರೆ. ಈ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ನಿಜವಾದ ಬಡವರಿಗೆ ಸೌಲಭ್ಯಗಳು ತಲುಪುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಯಾರಿಗೆ ನೋಟಿಸ್?

ಈಗಾಗಲೇ, ಅನರ್ಹ ಕಾರ್ಡ್‌ದಾರರ ಪಟ್ಟಿಯನ್ನು ಆಹಾರ ಇಲಾಖೆ ಸಿದ್ಧಪಡಿಸಿದೆ. ನಗರಗಳಲ್ಲಿರುವ ಅನ್ನಭಾಗ್ಯ ಪಡಿತರ ಅಂಗಡಿಗಳ ಮಾಲಿಕರು ಈ ಪಟ್ಟಿಯನ್ನು ಪ್ರದರ್ಶಿಸಿದ್ದು, ಪಟ್ಟಿಯಲ್ಲಿರುವವರು ತಕ್ಷಣವೇ ಆಧಾರ್, ಪಾನ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯಂತಹ ಅಗತ್ಯ ದಾಖಲೆಗಳನ್ನು ನೀಡಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ. ಅಗತ್ಯ ದಾಖಲೆಗಳನ್ನು ನೀಡದ ಅಥವಾ ಅನರ್ಹರೆಂದು ಕಂಡುಬಂದವರ ಕಾರ್ಡುಗಳನ್ನು ಎಪಿಎಲ್‌ಗೆ ವರ್ಗಾಯಿಸಲಾಗುವುದು.

ಅನರ್ಹ ಪಡಿತರ ಚೀಟಿ ರದ್ದತಿ ಆರಂಭಿಸಿದ ಸರ್ಕಾರ: ಸಂಬಂಧಪಟ್ಟವರಿಗೆ ನೋಟಿಸ್ ಜಾರಿ

ಯಾದಗಿರಿ ಪ್ರಕರಣ ಸಿಐಡಿಗೆ ವರ್ಗಾವಣೆ

ಇದೇ ವೇಳೆ, ಯಾದಗಿರಿ ಪಡಿತರ ಅಕ್ರಮ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಅಧಿಕಾರಿಗಳು ನಡೆಸಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ.

ಸಾರ್ವಜನಿಕರಿಗೆ ಮನವಿ

ಸರ್ಕಾರದ ಈ ಕ್ರಮವು ಪಡಿತರ ವ್ಯವಸ್ಥೆಯನ್ನು ಸುಧಾರಿಸುವ ಮತ್ತು ನಿಜವಾದ ಫಲಾನುಭವಿಗಳಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಮಹತ್ವದ್ದಾಗಿದೆ. ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕರಿಸಬೇಕು ಮತ್ತು ತಾವೂ ಕೂಡ ತಮ್ಮ ಅರ್ಹತೆಯನ್ನು ಪರಿಶೀಲಿಸಿಕೊಂಡು ಅನಗತ್ಯ ಸಮಸ್ಯೆಗಳನ್ನು ತಪ್ಪಿಸಿಕೊಳ್ಳಲು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ನೇರವಾಗಿ ಆಹಾರ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.