ಬೆಂಗಳೂರು :  ‘ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಯಾವುದೇ ಅನುಮಾನ ಬೇಡ. ನಿಗದಿಯಂತೆ ಡಿಸೆಂಬರ್‌ 22ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದು ಪಕ್ಕಾ. ಧೈರ್ಯವಾಗಿ ಅಧಿವೇಶನಕ್ಕೆ ಹೋಗುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕ್ವೀನ್ಸ್‌ ರಸ್ತೆಯ ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಉತ್ತಮ ಭಾರತ’ (ಬೆಹತರ್‌ ಭಾರತ್‌) ವಿದ್ಯಾರ್ಥಿ ಸಂವಾದಕ್ಕೆ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಕೆಲ ಶಾಸಕರೇ ಅನುಮಾನ ವ್ಯಕ್ತಪಡಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕರು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಂಪುಟ ವಿಸ್ತರಣೆಗೆ ತೀರ್ಮಾನಿಸಿಯಾಗಿದೆ. ಡಿ.18ರಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇದರ ಬೆನ್ನಲ್ಲೇ ಡಿ.22ರಂದು ಸಂಪುಟ ವಿಸ್ತರಣೆ ನಡೆಯುವುದು ಪಕ್ಕಾ. ಇದರಲ್ಲಿ ಯಾವುದೇ ಅನುಮಾನ ಬೇಕಿಲ್ಲ. ಸಂಪುಟ ವಿಸ್ತರಣೆಗೂ ಅಧಿವೇಶನದಲ್ಲಿ ಪಾಲ್ಗೊಳ್ಳುವಿಕೆಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.