ಬೆಂಗಳೂರು[ಮೇ.09]: ‘ಸಿದ್ದು ಸಿಎಂ’ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡದಂತೆ ನಿಯಂತ್ರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿ

ಸಿದ್ದರಾಮಯ್ಯ ಅವರು ಮುಂದಿನ ಅವಧಿಗೆ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ನಾಯಕರು ಸಾಲು-ಸಾಲಾಗಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿವೆ. ಈ ಬಗ್ಗೆ ಚರ್ಚಿಸಲು ಹಾಗೂ ಚಿಂಚೋಳಿ, ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸುವಂತೆ ಆಹ್ವಾನ ನೀಡಲು ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ನಾಯ ಕರ ಹೇಳಿಕೆಗಳ ಬಗ್ಗೆ ಕುಮಾರಸ್ವಾಮಿ ಅಸಮಾ ಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿ ಬಹಿರಂಗವಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಎಂದು ಹೇಳಿಕೆ ನೀಡುವ ಮೂಲಕ ಮೈತ್ರಿ ಧರ್ಮಕ್ಕೆ ಹಾಗೂ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತಿರುವವರಿಗೆ ಅವಮಾನ ಮಾಡುತ್ತಿದ್ದಾರೆ.

ಇಂತಹ ಹೇಳಿಕೆಗಳಿಂದ ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟಾಗಲಿದ್ದು, ರಾಜಕೀಯ ಧ್ರುವೀಕರಣಕ್ಕೆ ನಾವೇ ವೇದಿಕೆ ಕಲ್ಪಿಸಿದಂತಾಗುತ್ತಿದೆ. ಸಚಿವರಾದ ಪುಟ್ಟರಂಗಶೆಟ್ಟಿ, ಎಂ.ಟಿ.ಬಿ.ನಾಗರಾಜು, ಎಂ.ಬಿ.ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಡಾ.ಕೆ. ಸುಧಾಕರ್ ಹೀಗೆ ಎಲ್ಲರೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ. ಲೋಕಸಭೆ ಫಲಿತಾಂಶ ಹತ್ತಿರ ಬರುತ್ತಿರುವಾಗ ಇಂತಹ ಹೇಳಿಕೆಗಳು ಸರ್ಕಾರದ ಅಸ್ತಿತ್ವದ ಬಗ್ಗೆ ಜನರಲ್ಲಿ ಅನುಮಾನಗಳನ್ನು ಹುಟ್ಟಿಸುತ್ತವೆ. ಇಂತಹ ಊಹಾಪೋಹಗಳು ಸೃಷ್ಟಿಯಾದರೆ ದೃಢ ಸರ್ಕಾರ ನೀಡಲು ಸಾಧ್ಯವಿಲ್ಲ. ಹೀಗಾದರೆ ಮೈತ್ರಿ ಸರ್ಕಾರದ ಎರಡೂ ಪಕ್ಷಗಳಿಗೆ ಕೆಟ್ಟ ಹೆಸರು ಬರುತ್ತದೆ ಎಂದು ಮುಖ್ಯಮಂತ್ರಿಗಳು ಅಸಮಾಧಾನ ತೋಡಿಕೊಂಡರು ಎಂದು ತಿಳಿದುಬಂದಿದೆ

ಈ ವೇಳೆ ಕಾಂಗ್ರೆಸ್‌ನ ಯಾವ ನಾಯಕರೂ ಈ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿಲ್ಲ. ಮುಂದಿನ ಅವಧಿಗೆ ಜನರು ಬಯಸಿದರೆ ಮುಖ್ಯಮಂತ್ರಿ ಆಗುತ್ತಾರೆ ಎನ್ನುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಸಮಾಧಾನಪಡಿಸಲು ಯತ್ನಿಸಿದರು. ಈ ವೇಳೆ ಮತ್ತಷ್ಟು ಅಸಮಾಧಾನಗೊಂಡ ಕುಮಾರಸ್ವಾಮಿ, ಮುಂದಿನ ಅವಧಿಗೆ ಮುಖ್ಯಮಂತ್ರಿ ಆಗುವ ಬಗ್ಗೆ ಈಗ ಹೇಳಿಕೆ ನೀಡುತ್ತಿರುವುದು ಏಕೆ? ಜನಸಾಮಾನ್ಯರಿಗೂ ನಾಯಕರ ಮಾತಿನ ಉದ್ದೇಶ ಅರ್ಥವಾಗುತ್ತದೆ. ಮೊದಲು ಅಂತಹ ಹೇಳಿಕೆಗಳನ್ನು ನೀಡದಂತೆ ನಿಯಂತ್ರಿಸಿ ಎಂದು ಸೂಚಿಸಿದರು ಎನ್ನಲಾಗಿದೆ.