ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ವಿವಿಧ ಪಕ್ಷಗಳಲ್ಲಿ ಜೋರಾಗಿದೆ. ಇದೇ ವೇಳೆ ಜೆಡಿಎಸ್ ಮುಖಂಡ ಎಚ್.ಡಿ ದೇವೇಗೌಡ ಸ್ಪರ್ಧೆಗೆ  ಪುತ್ರ ಕುಮಾರಸ್ವಾಮಿ ವೇದಿಕೆ ಸಜ್ಜು ಮಾಡುತ್ತಿದ್ದಾರೆ. 

ಬೆಂಗಳೂರು : ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸ್ಪರ್ಧಿಸುವ ಸಾಧ್ಯತೆಯ ವದಂತಿಗೆ ಪುಷ್ಠಿ ನೀಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನಗರದಲ್ಲಿನ ಪಕ್ಷದ ಶಾಸಕರ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಳೆದ ವಾರವಷ್ಟೇ ಮಹಾಲಕ್ಷ್ಮೇ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಶನಿವಾರ ದಾಸರಹಳ್ಳಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ ಮತ್ತು ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರು ಇದ್ದು, ಇವೆರಡೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ.

ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಾಗೂ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇರುವ ಕಾರಣ ಆ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರದ ಪೈಕಿ ದಾಸರಹಳ್ಳಿ ಮತ್ತು ಮಹಾಲಕ್ಷೀ ಲೇಔಟ್‌ ಕ್ಷೇತ್ರವು ಜೆಡಿಎಸ್‌ ಪಾಲಾಗಿದೆ. ಅಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವ ಮೂಲಕ ಅಲ್ಲಿನ ಜನರನ್ನು ಸೆಳೆಯುವ ಪ್ರಯತ್ನ ಇದಾಗಿದೆ ಎಂದು ಹೇಳಲಾಗಿದೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ, ನಾಗರಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳ ಜನಸೇವಕ ಯೋಜನೆಗಳಿಗೆ ಚಾಲನೆ ನೀಡುವ ನೀಡಲಾಗುತ್ತದೆ. ಇದಲ್ಲದೇ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.