ಬೆಂಗಳೂರು :  ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಂಪುಟ ವಿಸ್ತರಣೆ ಸೇರಿದಂತೆ ವಿವಿಧ ನೇಮಕಾತಿಗಳ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಕೂಡ ಭರದ ತಯಾರಿ ಆರಂಭಿಸಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿನ ವಾಸ್ತವ ರಾಜಕೀಯ ಪರಿಸ್ಥಿತಿಯನ್ನು ತಿಳಿದುಕೊಂಡು ಯಾರನ್ನು ಕಣಕ್ಕಿಳಿಸಿದರೆ ಸೂಕ್ತ ಎಂಬುದರ ಅಭಿಪ್ರಾಯ ಸಂಗ್ರಹಿಸುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರದಿಂದ ಕ್ಷೇತ್ರವಾರು ಮುಖಂಡರ ಸಭೆ ಕೈಗೆತ್ತಿಕೊಂಡಿದ್ದಾರೆ.

ಮೊದಲ ದಿನವಾದ ಭಾನುವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಸಲಾಗಿದ್ದು, ಎರಡನೆಯ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮುಖಂಡರ ಸಭೆ ನಡೆಸಲು ನಿರ್ಧರಿಸಲಾಗಿದೆ. ಕಳೆದ ವಾರ ಬೆಳಗಾವಿಯಲ್ಲಿ ನಡೆದ ಪಕ್ಷದ ಎಲ್ಲ ಹಂತಗಳ ಮುಖಂಡರನ್ನು ಒಳಗೊಂಡ ವಿಶೇಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿತ್ತು.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಸ್ಥಾನ ಹೊಂದಾಣಿಕೆ ಮೂಲಕ ಒಟ್ಟಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅದು ಪರಿಣಾಮ ಬೀರಬಹುದಾದ ದಕ್ಷಿಣ ಕರ್ನಾಟಕದಿಂದಲೇ ಲೋಕಸಭಾ ಕ್ಷೇತ್ರಗಳ ಪರಿಸ್ಥಿತಿ ತಿಳಿಯುವ ಕೆಲಸಕ್ಕೆ ಬಿಜೆಪಿ ಮುಖಂಡರು ಕೈಹಾಕಿದ್ದಾರೆ ಎನ್ನಲಾಗಿದೆ.

ಎಲ್ಲ ಲೋಕಸಭಾ ಕ್ಷೇತ್ರಗಳ ವಿದ್ಯಮಾನಗಳ ಕುರಿತು ಅಭಿಪ್ರಾಯ ಸಂಗ್ರಹಿಸಿದ ನಂತರ ಅದನ್ನು ವರದಿ ರೂಪದಲ್ಲಿ ಪಕ್ಷದ ವರಿಷ್ಠರಿಗೆ ರವಾನಿಸಲಾಗುತ್ತದೆ. ಅದರ ಆಧಾರದ ಮೇಲೆ ವರಿಷ್ಠರು ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಹೊಸ ವರ್ಷದಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ವೇಳೆಗೆ ಈ ಎಲ್ಲ ಲೋಕಸಭಾ ಕ್ಷೇತ್ರಗಳ ಸಮಗ್ರ ಮಾಹಿತಿಯನ್ನು ಕಲೆಹಾಕುವ ಸಭೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಇದು ಅಭ್ಯರ್ಥಿ ಆಯ್ಕೆ ಮಾಡುವ ಪ್ರಕ್ರಿಯೆ ಅಲ್ಲ. ಆದರೆ, ಅಭ್ಯರ್ಥಿಗಳು ಯಾರಾಗಬಹುದು ಎಂಬುದರ ಸ್ಥೂಲ ಮಾಹಿತಿ ಪಡೆಯಲಾಗುವುದು. ಜತೆಗೆ ಆಯಾ ಕ್ಷೇತ್ರಗಳಲ್ಲಿ ಇತರ ಪಕ್ಷಗಳ ಬಲಾಬಲ ಹೇಗೆ? ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವುದರಿಂದ ಆಗಬಹುದಾದ ಲಾಭ-ನಷ್ಟಗಳೇನು? ಬಿಜೆಪಿಯ ಬಲ ಮತ್ತು ದೌರ್ಬಲ್ಯ ಏನೇನು ಎಂಬಿತ್ಯಾದಿ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದು ತಿಳಿದು ಬಂದಿದೆ.

ಭಾನುವಾರ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್‌ ಲಿಂಬಾವಳಿ, ಶೋಭಾ ಕರಂದ್ಲಾಜೆ, ಎನ್‌.ರವಿಕುಮಾರ್‌ ಸೇರಿದಂತೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಶಾಸಕರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.

ಕೋಲಾರ ಕ್ಷೇತ್ರದಿಂದ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರೂ ಆಗಿರುವ ಡಿ.ಎಸ್‌.ವೀರಯ್ಯ, ಕಾಂಗ್ರೆಸ್‌ನಿಂದ ವಲಸೆ ಬಂದಿರುವ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರ ಹೆಸರುಗಳು ಪ್ರಮುಖವಾಗಿ ಪ್ರಸ್ತಾಪವಾಗಿವೆ. ಅದೇ ರೀತಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಕಳೆದ ಬಾರಿ ಸ್ಪರ್ಧಿಸಿ ಪ್ರಬಲ ಪೈಪೋಟಿ ನೀಡಿದ್ದ ಬಿ.ಎನ್‌.ಬಚ್ಚೇಗೌಡ ಅವರ ಹೆಸರು ಸಭೆಯಲ್ಲಿ ಪ್ರಮುಖವಾಗಿ ಕೇಳಿಬಂದಿದೆ ಎನ್ನಲಾಗಿದೆ.

ಬೆಂಗಳೂರಿನ 3 ಕ್ಷೇತ್ರದ ಸಭೆ

ಸೋಮವಾರ ಬೆಂಗಳೂರು ಉತ್ತರ, ಸೆಂಟ್ರಲ್‌ ಮತ್ತು ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯ ಸಂಸದರು, ಶಾಸಕರು ಹಾಗೂ ಮುಖಂಡರ ಸಭೆ ನಡೆಯಲಿದೆ.

ಸದ್ಯದ ಪರಿಸ್ಥಿತಿಯಲ್ಲಿ ಉತ್ತರ ಮತ್ತು ಸೆಂಟ್ರಲ್‌ ಕ್ಷೇತ್ರಗಳ ಅಭ್ಯರ್ಥಿಗಳ ಬದಲಾವಣೆ ಸಾಧ್ಯತೆ ತೀರಾ ಕಡಿಮೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಅನಂತಕುಮಾರ್‌ ಅವರ ಅಕಾಲಿಕ ನಿಧನದಿಂದ ತೆರವಾಗಿರುವುದರಿಂದ ಅದರ ಬಗ್ಗೆ ಹೆಚ್ಚು ಚರ್ಚೆ ನಡೆಯುವ ಸಂಭವವಿದೆ.

ಅನಂತಕುಮಾರ್‌ ಅವರ ಪತ್ನಿ ತೇಜಸ್ವಿನಿ ಅವರನ್ನೇ ಕಣಕ್ಕಿಳಿಸುವ ಬಗ್ಗೆ ಮಾತುಗಳು ಕೇಳಿಬರುತ್ತಿವೆಯಾದರೂ ಈ ಬಗ್ಗೆ ಸ್ವತಃ ತೇಜಸ್ವಿನಿ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ಅಥವಾ ಅಭಿಪ್ರಾಯ ಹೊರಹಾಕಿಲ್ಲ. ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂಬ ಅಭಿಪ್ರಾಯವನ್ನೂ ಅವರು ಹೊಂದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಪಕ್ಷದ ವಲಯದಲ್ಲಿ ಅವರನ್ನೇ ಕಣಕ್ಕಿಳಿಸಿದರೆ ಸೂಕ್ತ ಎಂಬ ಅಭಿಪ್ರಾಯ ದಟ್ಟವಾಗಿದೆ. ಈ ಬಗ್ಗೆಯೂ ಸೋಮವಾರದ ಸಭೆಯಲ್ಲಿ ಸ್ಪಷ್ಟಚಿತ್ರಣ ಹೊರಬೀಳುವ ನಿರೀಕ್ಷೆಯಿದೆ.