ಬೆಂಗಳೂರು :  ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಇತ್ತೀಚೆಗೆ ನಿಧನ ಹೊಂದಿದ ಕೇಂದ್ರದ ಸಚಿವರಾಗಿದ್ದ ಅನಂತಕುಮಾರ್‌ ಅವರ ಪತ್ನಿ ತೇಜಸ್ವಿನಿ ಅವರನ್ನೇ ಅಭ್ಯರ್ಥಿಯನ್ನಾಗಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರು ಹಾಗೂ ಮುಖಂಡರು ತೇಜಸ್ವಿನಿ ಅವರನ್ನು ಕಣಕ್ಕಿಳಿಸುವುದರಿಂದ ಅನಂತಕುಮಾರ್‌ ಅವರಿಗೆ ಗೌರವ ಸಲ್ಲಿಸಿದಂತಾಗುದೆಯಲ್ಲದೆ ಪಕ್ಷದ ಗೆಲುವಿಗೂ ಅನುಕೂಲವಾಗುತ್ತದೆ. ಮೇಲಾಗಿ ತೇಜಸ್ವಿನಿ ಅವರಿಗೆ ಕ್ಷೇತ್ರದ ಮೇಲೆ ಹಿಡಿತವಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಆದರೆ, ತೇಜಸ್ವಿನಿ ಅವರು ಸ್ಪರ್ಧಿಸಲು ಒಪ್ಪಿಕೊಳ್ಳುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರನ್ನು ಮನವೊಲಿಸುವ ವಿಶ್ವಾಸವಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪಿ.ಸಿ.ಮೋಹನ್‌ ಅವರನ್ನೇ ಕಣಕ್ಕಿಳಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.